ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಅದು ಕೂಡ ಬದ್ಧವೈರಿ ಪಾಕಿಸ್ತಾನ್ ವಿರುದ್ಧ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್ ಕಲೆಹಾಕಿತು. ಈ ಗುರಿಯನ್ನು 42.3 ಓವರ್ಗಳಲ್ಲಿ ಟೀಮ್ ಇಂಡಿಯಾ ನಿರಾಯಾಸವಾಗಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಭರ್ಜರಿ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಏಕೆಂದರೆ ಈ ಮ್ಯಾಚ್ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಪಾಕ್ ಬೌಲರ್ಗಳನ್ನು ಬೆಂಡೆತ್ತುವ ಮೂಲಕ 111 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ದಾಖಲೆಗಳ ಸರದಾರ ತನ್ನ ಹೆಸರಿಗೆ ಮತ್ತಷ್ಟು ದಾಖಲೆಗಳನ್ನು ಸೇರ್ಪಡೆಗೊಳಿಸಿದರು. ಅದರಂತೆ ಕಿಂಗ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿರುವ ಹೊಸ ದಾಖಲೆಗಳಾವುವು ಎಂದು ನೋಡುವುದಾದರೆ...
ರನ್ ಸರದಾರ: ಈ ಪಂದ್ಯದಲ್ಲಿ ಶತಕ ಬಾರಿಸುವುದೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ. ಅದು ಸಹ ಕೇವಲ 287 ಇನಿಂಗ್ಸ್ಗಳ ಮೂಲಕ. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 14000 ರನ್ ಕಲೆಹಾಕಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ.
ಫಿಫ್ಟಿ ಪ್ಲಸ್ ಸರದಾರ: ಐಸಿಸಿ ಏಕದಿನ ಟೂರ್ನಿಯಲ್ಲಿ ಅತ್ಯಧಿಕ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ 23 ಫಿಫ್ಟಿ ಪ್ಲಸ್ ಸ್ಕೋರ್ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಕಿಂಗ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.
ಪಂದ್ಯ ಪುರುಷ: ಈ ಪಂದ್ಯದಲ್ಲಿ ಬಾರಿಸಿದ ಶತಕದೊಂದಿಗೆ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 14 ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಶತಕ ಸರದಾರ: ಏಕದಿನ ಕ್ರಿಕೆಟ್ನಲ್ಲಿ 50+ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ 50 ಸೆಂಚುರಿಗಳೊಂದಿಗೆ ವಿಶ್ವ ದಾಖಲೆ ಬರೆದಿದ್ದ ಕಿಂಗ್ ಕೊಹ್ಲಿ ಇದೀಗ 51ನೇ ಶತಕದೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ರನ್ ಮೆಷಿನ್: ಪಾಕಿಸ್ತಾನ್ ವಿರುದ್ಧ ಶತಕ ಬಾರಿಸುವುದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 14 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (18426) ಹಾಗೂ ಕುಮಾರ್ ಸಂಗಾಕ್ಕರ (14234) ಮೊದಲೆರಡು ಸ್ಥಾನಗಳಲ್ಲಿದ್ದಾರೆ.
ಬೆಸ್ಟ್ ಫೀಲ್ಡರ್: ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಕ್ಯಾಚ್ಗಳನ್ನು ಸಹ ಹಿಡಿದಿದ್ದಾರೆ. ಇದರೊಂದಿಗೆ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಫೀಲ್ಡರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಅಝರುದ್ದೀನ್ (156) ಹೆಸರಿನಲ್ಲಿತ್ತು. ಇದೀಗ 158 ಕ್ಯಾಚ್ಗಳೊಂದಿಗೆ ಕಿಂಗ್ ಕೊಹ್ಲಿ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.
Published On - 9:04 am, Mon, 24 February 25