ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿರುವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಆರ್ಸಿಬಿ ಪರ 275 ಪಂದ್ಯಗಳನ್ನಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
Updated on: Apr 28, 2026 | 3:30 PM

IPL 2026: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ. ಅಂದರೆ ಈ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ ಎಂಬುದು ವಿಶೇಷ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 23 ರನ್ ಬಾರಿಸಿದ್ದರು. ಈ ಇಪ್ಪತ್ತು ರನ್ಗಳೊಂದಿಗೆ ಕಿಂಗ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 9000 ರನ್ ಪೂರೈಸಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 9 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9000 ರನ್ ಗಳಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್) 6,013 ರನ್ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್ಶೈರ್) 5,934 ರನ್ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಈವರೆಗೆ 267 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 6735 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳೊಂದಿಗೆ 9012 ರನ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.




