
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 108 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ 124 ರನ್ ಬಾರಿಸಿದ್ದರು.

ಈ ಶತಕದೊಂದಿಗೆ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ 35 ಮೈದಾನಗಳಲ್ಲಿ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ 34 ಮೈದಾನಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಗ್ರೌಂಡ್ನಲ್ಲಿ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ಹೊಸ ನಿರ್ಮಿಸಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 35 ಮೈದಾನಗಳಲ್ಲಿ ಏಕದಿನ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೈದಾನದಲ್ಲಿ ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.