ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಮಾರ್ಚ್ 9 ರಂದು ದುಬೈನಲ್ಲಿ ನಡೆಯಲಿದೆ. ಇದೇ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ನ ದಿಗ್ಗಜ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮುರಿಯುವ ಸಮೀಪದಲ್ಲಿದ್ದಾರೆ
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ ಜೋರಾಗಿ ಮಾತನಾಡುತ್ತಿದೆ. ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ವಿರಾಟ್ ಶತಕದ ಇನ್ನಿಂಗ್ಸ್ ಆಡಿದ್ದರು. ಆ ಬಳಿಕ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ವಿರಾಟ್ 98 ಎಸೆತಗಳಲ್ಲಿ 84 ರನ್ಗಳ ಮಹತ್ವದ ಇನ್ನಿಂಗ್ಸ್ ಆಡಿದ್ದರು. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿರಾಟ್ ಇದೇ ಫಾರ್ಮ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರೆ, ದುಬೈ ನೆಲದಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ.
ವಾಸ್ತವವಾಗಿ, ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಪ್ರಸ್ತುತ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 17 ಪಂದ್ಯಗಳಲ್ಲಿ 52 ಸರಾಸರಿಯಲ್ಲಿ 791 ರನ್ ಗಳಿಸಿದ್ದಾರೆ. ಪ್ರಸ್ತುತ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 16 ಇನ್ನಿಂಗ್ಸ್‌ಗಳಲ್ಲಿ 746 ರನ್ ಕಲೆಹಾಕಿದ್ದಾರೆ.
ಈಗ ವಿರಾಟ್ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 46 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಲಿದ್ದು, ಅಗ್ರಸ್ಥಾನಕ್ಕೇರಲಿದ್ದಾರೆ.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಇದುವರೆಗೆ ಆಡಿರುವ 4 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 72.33 ರ ಸರಾಸರಿಯಲ್ಲಿ 217 ರನ್ ಗಳಿಸಿದ್ದಾರೆ. ಈ 4 ಪಂದ್ಯಗಳಲ್ಲಿ ಕೊಹ್ಲಿ ಬ್ಯಾಟ್ನಿಂದ ಒಂದು ಶತಕ ಮತ್ತು ಒಂದು ಅರ್ಧಶತಕ ಸೇರಿವೆ. ಈ ಎರಡು ಅಮೋಘ ಇನ್ನಿಂಗ್ಸ್ನಿಂದಾಗಿಯೇ ಭಾರತ ಇಂದು ಚಾಂಪಿಯನ್ಸ್ ಟ್ರೋಫಿ ಫೈನಲ್ಗೆ ಲಗ್ಗೆ ಇಟ್ಟಿದೆ.