
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ.

ಶತಕದ ಸರದಾರ: ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿಯ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಒಟ್ಟು 6 ಶತಕ ಬಾರಿಸಿದ್ದರು. ಇದೀಗ ಕಿಂಗ್ ಕೊಹ್ಲಿ ಒಟ್ಟು 7 ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಸೆಂಚುರಿ ಸರದಾರ: ಆರ್ಸಿಬಿ ಪರ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿಯ ಪಾಲಾಗಿದೆ. ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಶತಕ ಬಾರಿಸಿದ್ದರು.

ಶತಕವೀರ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಇದೀಗ ಒಟ್ಟು 8 ಶತಕಗಳೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 7 ಶತಕ ಬಾರಿಸಿದ್ದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1 ಶತಕ ಸಿಡಿಸಿದ್ದಾರೆ.

ಬ್ಯಾಕ್ ಟು ಬ್ಯಾಕ್ ಅಬ್ಬರ: ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ 2 ಶತಕ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶಿಖರ್ ಧವನ್ (2021) ಹಾಗೂ ಜೋಸ್ ಬಟ್ಲರ್ (2022) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಕಿಂಗ್ ಕೊಹ್ಲಿ ಕೂಡ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಒಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡು ದಾಖಲೆ ಮೇಲೆ ದಾಖಲೆ ನಿರ್ಮಿಸಿರುವುದು ವಿಶೇಷ.