ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ 3ನೇ ಟೆಸ್ಟ್ ಪಂದ್ಯದ ವೇಳೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.
ಆದರೀಗ ಕೊನೆಯ ಮೂರು ಪಂದ್ಯಗಳಿಂದಲೂ ವಿರಾಟ್ ಕೊಹ್ಲಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾ ಟೆಸ್ಟ್ ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.
ಕಳೆದ 13 ವರ್ಷಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ಟೆಸ್ಟ್ ಸರಣಿ ತಪ್ಪಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಗೆ ಎಂಬುದು ವಿಶೇಷ. ಅಂದರೆ 2011 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ ಆ ಬಳಿಕ ಯಾವತ್ತೂ ಒಮ್ಮೆ ಮಾತ್ರ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದಾದ ಬಳಿಕ ಯಾವುದೇ ಟೆಸ್ಟ್ ಸರಣಿಗೆ ಅಲಭ್ಯರಾಗಿರಲಿಲ್ಲ.
ಇದೀಗ ಇದೇ ಮೊದಲ ಬಾರಿಗೆ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಅದರಂತೆ 13 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಇಲ್ಲದೆ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆಡುತ್ತಿರುವುದು ವಿಶೇಷ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ. ಇನ್ನು 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿದೆ. ಹಾಗೆಯೇ ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯವು ಧರ್ಮಶಾಲಾದ HPCA ಮೈದಾನದಲ್ಲಿ ನಡೆಯಲಿದೆ.
Published On - 12:08 pm, Sat, 10 February 24