- Kannada News Photo gallery Cricket photos WCL 2025 Semi-Final Schedule: India Champions Face Pakistan Champions
WCL 2025: ಮತ್ತೆ ಭಾರತ vs ಪಾಕಿಸ್ತಾನ್ ಮುಖಾಮುಖಿ: ಸಂಕಷ್ಟಕ್ಕೆ ಸಿಲುಕಿದ ಆಯೋಜಕರು
WCL 2025: ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿದ್ದವು. ಈ ಆರು ತಂಡಗಳಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನ್ ಚಾಂಪಿಯನ್ಸ್, ಆಸ್ಟ್ರೇಲಿಯಾ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಸೆಮಿಫೈನಲ್ಗೇರಿದೆ. ಇನ್ನು ವೆಸ್ಟ್ ಇಂಡೀಸ್ ಚಾಂಪಿಯನ್ಸ್ ಹಾಗೂ ಇಂಗ್ಲೆಂಡ್ ಚಾಂಪಿಯನ್ಸ್ ಟೂರ್ನಿಯಿಂದ ಹೊರಬಿದ್ದಿದೆ.
Updated on: Jul 30, 2025 | 12:53 PM

ವರ್ಲ್ಡ್ ಚಾಂಪಿಯನ್ ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದೊಂದಿಗೆ 4 ತಂಡಗಳು ಸೆಮಿಫೈನಲ್ಗೆ ಪ್ರವೇಶಿಸಿದರೆ 2 ಟೀಮ್ಗಳು ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಸೆಮಿಫೈನಲ್ಗೆ ಪ್ರವೇಶಿಸಿದ ತಂಡಗಳಲ್ಲಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳಿವೆ.

ಅತ್ತ ಪಾಕಿಸ್ತಾನ್ ಚಾಂಪಿಯನ್ಸ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಇತ್ತ ಇಂಡಿಯಾ ಚಾಂಪಿಯನ್ಸ್ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ಉಭಯ ತಂಡಗಳು ಮೊದಲ ಸೆಮಿಫೈನಲ್ನಲ್ಲಿ ಮುಖಾಮುಖಿಯಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೂ ಮುನ್ನ ಜುಲೈ 20 ರಂದು ನಡೆಯಬೇಕಿದ್ದ ಪಾಕಿಸ್ತಾನ್ ವಿರುದ್ಧ ಪಂದ್ಯದಿಂದ ಇಂಡಿಯಾ ಆಟಗಾರರು ಹಿಂದೆ ಸರಿದಿದ್ದರು.

ಪಹಲ್ಗಾಮ್ನಲ್ಲಿನ ಉಗ್ರರ ದಾಳಿಯನ್ನು ಖಂಡಿಸಿ ಇಂಡಿಯಾ ಚಾಂಪಿಯನ್ಸ್ ತಂಡದ ಆಟಗಾರರಾದ ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ಪಾಕ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದರು. ಹೀಗಾಗಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ನಡುವಣ ಪಂದ್ಯವನ್ನು ಕ್ಯಾನ್ಸಲ್ ಮಾಡಲಾಗಿತ್ತು.

ಇದೀಗ ಮತ್ತೆ ಉಭಯ ತಂಡಗಳು ಸೆಮಿಫೈನಲ್ನಲ್ಲಿ ಮುಖಾಮುಖಿಯಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಆಯೋಜಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಕೆಂದರೆ ಕಳೆದ ಪಂದ್ಯದಲ್ಲಿ ಪಾಕ್ ವಿರುದ್ಧ ಕಣಕ್ಕಿಳಿಯಲು ಹಿಂದೇಟು ಹಾಕಿದ್ದ ಇಂಡಿಯಾ ಆಟಗಾರರು ಮತ್ತೊಮ್ಮೆ ಪಂದ್ಯವನ್ನು ಬಹಿಷ್ಕರಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿಯೇ WCL ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ಕುತೂಹಲ.

ಮೊದಲ ಸೆಮಿಫೈನಲ್: ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯವು ಜುಲೈ 31 ರಂದು ನಡೆಯಲಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಎರಡನೇ ಸೆಮಿಫೈನಲ್: WCL ಟೂರ್ನಿಯ ದ್ವಿತೀಯ ಸೆಮಿಫೈನಲ್ ಪಂದ್ಯ ಕೂಡ ಜುಲೈ 31 ರಂದೇ ನಡೆಯಲಿದೆ. ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ಗಳಲ್ಲಿ ಗೆಲ್ಲುವ ತಂಡಗಳು ಆಗಸ್ಟ್ 1 ರಂದು ನಡೆಯಲಿರುವ ಫೈನಲ್ನಲ್ಲಿ ಕಣಕ್ಕಿಳಿಯಲಿದೆ.
