
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಿದರೆ, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.

ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆಟಗಾರನನ್ನು 15 ಸದಸ್ಯರುಗಳ ತಂಡದಿಂದ ಕೈ ಬಿಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಅಲಭ್ಯರಾಗಿರುವ ಮೂವರು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಧ್ರುವ್ ಜುರೆಲ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರನ್ನು 15 ಸದಸ್ಯರುಗಳ ಬಳಗದಿಂದಲೇ ಕೈ ಬಿಡಲಾಗಿದೆ.

ತಿಲಕ್ ವರ್ಮಾ: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಅವರನ್ನು ಸಹ ಈ ಬಾರಿ ತಂಡದಿಂದ ಕೈ ಬಿಡಲಾಗಿದೆ. ಏಕೆಂದರೆ ಕಳೆದ ಸರಣಿಯಲ್ಲಿ ಶುಭ್ಮನ್ ಗಿಲ್ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿತ್ತು.

ರುತುರಾಜ್ ಗಾಯಕ್ವಾಡ್: ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 105 ರನ್ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.