
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಜೆಮಿಮಾ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಈ ಸ್ಲೋ ಓವರ್ ರೇಟ್ ತಪ್ಪಿಗಾಗಿ ಜೆಮಿಮಾ ರೊಡ್ರಿಗಸ್ 12 ಲಕ್ಷ ರೂ. ಪಾವತಿಸಬೇಕಾಗಿ ಬಂದಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಿದ್ದಾರೆ.

ಒಂದು ವೇಳೆ ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕಿಗೆ 30 ಲಕ್ಷ ದಂಡ ವಿಧಿಸಲಿದ್ದಾರೆ. ಅಲ್ಲದೆ ನಾಯಕಿಯು ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಜೆಮಿಮಾ ರೊಡ್ರಿಗಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಲೋ ಓವರ್ ರೇಟ್ ತಪ್ಪು ಮಾಡದಂತೆ ಎಚ್ಚರಿಕೆವಹಿಸಬೇಕಾಗುತ್ತದೆ.