Yashasvi Jaiswal: ದ್ರಾವಿಡ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್: ಮುಂದಿನ ಟಾರ್ಗೆಟ್ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Feb 25, 2024 | 8:54 AM
Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ 2 ದ್ವಿಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಜೊತೆಗೆ ಇದೀಗ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ವಿಶೇಷ ರೆಕಾರ್ಡ್ವೊಂದನ್ನು ಯಶಸ್ವಿಯಾಗಿ ಜೈಸ್ವಾಲ್ ಮುರಿದಿದ್ದಾರೆ.
1 / 6
ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 117 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 73 ರನ್ ಬಾರಿಸಿದರು.
2 / 6
ಈ 73 ರನ್ಗಳೊಂದಿಗೆ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ 600 ಕ್ಕೂ ಅಧಿಕ ರನ್ ಕಲೆಹಾಕಿದ ವಿಶೇಷ ಸಾಧನೆ ಮಾಡಿದರು. ಅದು ಕೂಡ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
3 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 600+ ರನ್ ಕಲೆಹಾಕಿರುವುದು ಕೇವಲ ಮೂವರು ಬ್ಯಾಟರ್ಗಳು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. 2017 ರಲ್ಲಿ ಕಿಂಗ್ ಕೊಹ್ಲಿ 8 ಇನಿಂಗ್ಸ್ಗಳಲ್ಲಿ 655 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ.
4 / 6
ಇನ್ನು ಇದಕ್ಕೂ ಮುನ್ನ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. 2002 ರಲ್ಲಿ ಇಂಗ್ಲೆಂಡ್ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ದ್ರಾವಿಡ್ 6 ಇನಿಂಗ್ಸ್ಗಳಲ್ಲಿ ಒಟ್ಟು 602 ರನ್ ಬಾರಿಸಿ ಈ ದಾಖಲೆ ಬರೆದಿದ್ದರು.
5 / 6
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 7 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಯಶಸ್ವಿ ಜೈಸ್ವಾಲ್ ಒಟ್ಟು 618 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಬಾರಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
6 / 6
ಸದ್ಯ 618 ರನ್ಗಳಿಸಿರುವ ಯಶಸ್ವಿ ಜೈಸ್ವಾಲ್ಗೆ ಹೊಸ ಇತಿಹಾಸ ನಿರ್ಮಿಸಲು ಬೇಕಿರುವುದು ಕೇವಲ 38 ರನ್ಗಳು ಮಾತ್ರ. ಒಂದು ವೇಳೆ ನಾಲ್ಕನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಅಥವಾ 5ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 38 ರನ್ ಬಾರಿಸಿದರೆ ವಿರಾಟ್ ಕೊಹ್ಲಿ (655) ಹೆಸರಿನಲ್ಲಿರುವ ಶ್ರೇಷ್ಠ ದಾಖಲೆಯನ್ನು ಮುರಿಯಬಹುದು. ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿದು ಯಶಸ್ವಿ ಹೊಸ ಇತಿಹಾಸ ಬರೆಲಿಯಲಿದ್ದಾರಾ ಕಾದು ನೋಡಬೇಕಿದೆ.
Published On - 8:54 am, Sun, 25 February 24