ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಸ್ಪೋಟಕ ಬ್ಯಾಟಿಂಗ್ಗೆ ಒತ್ತು ನೀಡಿದರು.
ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ 50 ರನ್ಗಳಿಸಲು 80 ಎಸೆತಗಳನ್ನು ಎದುರಿಸಿದ್ದರು. ಆದರೆ ಅರ್ಧಶತಕ ಪೂರೈಸುತ್ತಿದ್ದಂತೆ ಬ್ಯಾಟಿಂಗ್ ಗೇರ್ ಬದಲಿಸಿ ಯಶಸ್ವಿ ಇಂಗ್ಲೆಂಡ್ ಬೌಲರ್ಗಳ ಬೆಂಡತ್ತಲು ಆರಂಭಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳ ಸುರಿಮಳೆಯಾಯಿತು.
ಈ ಸಿಕ್ಸ್-ಫೋರ್ಗಳೊಂದಿಗೆ ಯಶಸ್ವಿ ಜೈಸ್ವಾಲ್ ಕೇವಲ 122 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಈ ಶತಕದೊಂದಿಗೆ ಯುವ ಎಡಗೈ ದಾಂಡಿಗ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಅಬ್ಬರಿಸುವ ಮೂಲಕ ಎಂಬುದು ವಿಶೇಷ.
ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ ಒಟ್ಟು 435* ರನ್ ಗಳಿಸಿದ್ದಾರೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿವೊಂದರಲ್ಲಿ 400+ ರನ್ ಕಲೆಹಾಕಿದ ವಿಶೇಷ ಸಾಧನೆ ಮಾಡಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಬಳಿಕ ಟೆಸ್ಟ್ ಸರಣಿಯೊಂದರಲ್ಲಿ ನಾನೂರಕ್ಕೂ ಅಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಬರೆದಿದ್ದು ವಿರಾಟ್ ಕೊಹ್ಲಿ. 2018ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಒಟ್ಟು 593 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದಾದ ಬಳಿಕ ಯಾವುದೇ ಬ್ಯಾಟರ್ಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 400 ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ.
ಇದೀಗ 6 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ 400+ ರನ್ ಕಲೆಹಾಕಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ಬ್ಯಾಟ್ಸ್ಮನ್ ಎಂಬ ವಿಶೇಷ ದಾಖಲೆಯೊಂದನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ 133 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 104 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ಸ್ನಾಯು ಸೆಳೆತಕ್ಕೆ ಒಳಗಾದ ಅವರು ರಿಟೈರ್ಡ್ ಹರ್ಟ್ ತೆಗೆದುಕೊಂಡರು. ಹೀಗಾಗಿ ಅವರು ನಾಲ್ಕನೇ ದಿನದಾಟದಲ್ಲಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಯಿದೆ.
Published On - 7:41 am, Sun, 18 February 24