ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ದ್ವಿಶತಕ ಬಾರಿಸಿದ ಇತಿಹಾಸ ನಿರ್ಮಿಸಿದ್ದ ಜೈಸ್ವಾಲ್ ಇದೀಗ ಸಿಕ್ಸ್ ಸಿಡಿಸಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಢಿದ್ದಾರೆ.
ರಾಂಚಿಯ ಜೆಎಸ್ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಜೈಸ್ವಾಲ್ 73 ರನ್ ಬಾರಿಸಿ ಮಿಂಚಿದ್ದರು. ಈ ಭರ್ಜರಿ ಅರ್ಧಶತಕದಲ್ಲಿ ಒಂದು ಸಿಕ್ಸರ್ ಕೂಡ ಒಳಗೊಂಡಿತ್ತು. ವಿಶೇಷ ಎಂದರೆ ಈ ಸಿಕ್ಸ್ನೊಂದಿಗೆ ಯಶಸ್ವಿ ಜೈಸ್ವಾಲ್ ಸಿಕ್ಸರ್ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ವರ್ಷವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ನ ದಾಖಲೆ ಇದೀಗ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಿಡಿಲಬ್ಬರದ ಸಿಡಿಲಮರಿ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.
2008 ರಲ್ಲಿ ವೀರೇಂದ್ರ ಸೆಹ್ವಾಗ್ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 22 ಸಿಕ್ಸ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದಾದ ಬಳಿಕ 2022 ರಲ್ಲಿ ರಿಷಭ್ ಪಂತ್ 21 ಸಿಕ್ಸ್ ಬಾರಿಸಿದರೂ ಸೆಹ್ವಾಗ್ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ.
ಇದೀಗ 2024 ರಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 23* ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.
ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಬರೆದಿರುವುದು ಕೇವಲ 7 ಇನಿಂಗ್ಸ್ಗಳ ಮೂಲಕ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ಯುವ ಎಡಗೈ ದಾಂಡಿಗ ಒಟ್ಟು 23 ಸಿಕ್ಸ್ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಟೆಸ್ಟ್ ಇನಿಂಗ್ಸ್ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಕೂಡ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ರಾಜ್ಕೋಟ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ 12 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಟೆಸ್ಟ್ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಜೈಸ್ವಾಲ್ ಇದೀಗ ಸಿಕ್ಸ್ಗಳೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.
Published On - 9:53 am, Sun, 25 February 24