
ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್.ಎಂ.ರೇವಣ್ಣ ಉಪಸ್ಥಿತರಿದ್ದರು.

ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.