ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ, ಬೆಂಗಳೂರು ನಗರದ ಹಲವೆಡೆ ಸೋಮವಾರ ಸಂಜೆಯೂ ಭಾರೀ ಮಳೆ ಸುರಿದಿದೆ. ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪರೇಷನ್, ಗಿರಿನಗರ, ಶಾಂತಿನಗರ, ರಿಚ್ಮಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ಧಾರಕಾರ ಮಳೆ ಸುರಿದಿದೆ. ಅಂಡರ್ಪಾಸ್ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ, ಐದನೇ ದಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಕೆಲ ಭಾಗಕ್ಕೆ ಎರಡು ದಿನ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ.
ಕರಾವಳಿ ಭಾಗಕ್ಕೆ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಗುಡುಗು ಸಮೇತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಮಂಗಳವಾರ ಮತ್ತು ಬುಧವಾರ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆ ಹಿನ್ನಲೆ ಮರಗಳ ಕೊಂಬೆಗಳು ಬೀಳುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ.
ಮಂಡ್ಯ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು, ಜಿಲ್ಲೆಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗಾಳಿ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ‘ಟಿವಿ9’ಗೆ ರಾಜ್ಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Published On - 10:19 pm, Mon, 22 May 23