
ಕೇರಳದ ವರ್ಕಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ರಾಜಧಾನಿ ತಿರುವನಂತಪುರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯಿ ವಿಜಯನ್ರನ್ನು ಭೇಟಿಯಾಗಿ ಆತ್ಮೀಯವಾಗಿ ಮಾತನಾಡಿದರು.

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾನು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇರಳದ ಶಿವಗಿರಿ ಮಠದಲ್ಲಿ ಆಯೋಜಿಸಿರುವ ಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸಮಸಮಾಜದ ಕನಸು ಬಿತ್ತಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿನೀಡಿ, ಗುರುಗಳಿಗೆ ನಮಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.