ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿವೆ. ಶನಿವಾರ ಬೆಳಗ್ಗೆ ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್ನಲ್ಲಿ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್‌ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ.ಬಿ. ಸುರೇಶ್ ಬಾಬು, ಮಾಜಿ ಸಚಿವ ಜಿ.ಟಿ. ದೇವೇಗೌಡ, ಕೇಂದ್ರ ಸಚಿವರು, ಕೋರ್ ಕಮಿಟಿ ಸದಸ್ಯರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ಮುಗಿಯವಷ್ಟರಲ್ಲಿ ಸಿದ್ದಾರಾಮಯ್ಯ ರಾಜೀನಾಮೆ ನಿಶ್ಚಿತ. ನಮ್ಮ ಪಾದಯಾತ್ರೆ ಮುಗಿಯುವವದರ ಒಳಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದುವರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಕೆಟ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದಕ್ಕೆ ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಲಾಗುತ್ತಿದೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ. ಪಾದಯಾತ್ರೆಯಲ್ಲಿ ಬಿಜೆಪಿ, ಕಾರ್ಯಕರ್ತರು ಮಾತ್ರ ಭಾಗಿಯಾಗುತ್ತಿಲ್ಲ, ಕೆಟ್ಟ ಸರ್ಕಾರ ಕಿತ್ತೊಗೆಯಲು ಜನರು ಸಹಕಾರ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಂದರು.
ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಬಳ್ಳಾರಿ ಪಾದಯಾತ್ರೆ ಮಾಡಿದರು. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿದ್ದರು.ಇವತ್ತು ಸಿಎಂ ಸಿದ್ದರಾಮಯ್ಯ ಕುಟುಂಬವೇ ಹಗರಣದಲ್ಲಿ ಸಿಲುಕಿದೆ. ಕರ್ಮ ರಿಟರ್ನ್ಸ್ ಆಗಿದೆ, ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ರಾಜ್ಯದ ಅಭಿವೃದ್ಧಿ ಕೆಲಸ ಮಾಡಿ ಎಂದು ಜನರು ಗೆಲ್ಲಿಸಿದ್ದಾರೆ. ಮುಡಾ ಹಗರಣ ಬಗ್ಗೆ ಚರ್ಚಿಸಲು ಸದನದಲ್ಲಿ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಹಗರಣ ಬಗ್ಗೆ ಜನರಿಗೆ ತಿಳಿಸಲು ಪಾದಯಾತ್ರೆ ಮಾಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ದಲಿತರ ಜಮೀನನ್ನು ಲೂಟಿ ಮಾಡಿದ್ದಾರೆ. ಕಾಂಗ್ರೆಸ್ ಒಡೆದ ಮನೆ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಾಡುತ್ತಿರುವ ಪಾದಯಾತ್ರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ಮಾಡಿದರು.
ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಇದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಗರಣ ಮೇಲೆ ಹಗರಣಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಂತ್ರಿಗಳು ಪೂರ್ತಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ವಾಲ್ಮೀಕಿ ನಿಗಮದ ಕೋಟ್ಯಾಂತರ ಹಣ ಕಾಂಗ್ರೆಸ್ನ ಚೇಲಾಗಳಿಗೆ ವರ್ಗಾವಣೆಯಾಗಿದೆ. ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾಲುದಾರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀವು ರಾಜಿನಾಮೆ ಕೊಡುವುದು ಸನಿಹ ಬಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದರು.
ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷ. ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಕೊಡಲು ಕಾಂಗ್ರೆಸ್ ಹವಣಿಸುತ್ತಿದೆ. ಆಗ ಎಲ್ಲಿದೆ ದಾಖಲೆ ಎಂದು ಕಾಂಗ್ರೆಸ್ ನಾಯಕರು ಕೇಳಿದ್ದರು. ಸದನದಲ್ಲಿ ವಾಲ್ಮೀಕಿ ನಿಗಮದ ಬಗ್ಗೆ ನಿಲುವಳಿ ಮಂಡನೆ ಮಾಡಿದ್ದೇವು. ನಿಲುವಳಿ ಮಂಡನೆ ಮಾಡಿದಾಗ ಕಾಂಗ್ರೆಸ್ಸಿಗರಿಗೆ ಆತಂಕ ಶುರುವಾಯ್ತು. ಮುಡಾ ವಿಚಾರ ಪ್ರಸ್ತಾಪ ಮಾಡಲ್ವಾ ಅಂತಾ ಕಾಂಗ್ರೆಸ್ಸಿಗರು ಕೇಳುತ್ತಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕುವೆ ಗೊಡ್ಡು ಬೆದರಿಕೆಯಿಂದ ನಮ್ಮ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಬಿ.ವೈ.ವಿಜಯೇಂದ್ರ ಗುಡುಗಿದರು.
Published On - 2:49 pm, Sat, 3 August 24