BR Patil: ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು; ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ

| Updated By: Ganapathi Sharma

Updated on: Jul 25, 2023 | 6:42 PM

ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಬಹಿರಂಗವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

BR Patil: ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು; ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ
ಕಾಂಗ್ರೆಸ್‌ ಶಾಸಕ ಬಿಆರ್ ಪಾಟೀಲ್
Follow us on

ಕಲಬುರಗಿ: ಅನುದಾನ ಬಿಡುಗಡೆ ಮಾಡಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಬಿಆರ್ ಪಾಟೀಲ್ (BR Patil) ಗಂಭೀರ ಆರೋಪ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಬಹಿರಂಗವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಲಬುರಗಿ ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರಗಳ ಶಾಸಕರ ಪತ್ರವನ್ನೂ ಸಹಿ ಒಳಗೊಂಡಿದೆ. ಪತ್ರದ ವಿಚಾರ ರಾಜಕೀಯ ಆಯಾಮ ಪಡೆದುಕೊಳ್ಳುತ್ತಿದ್ದಂತೆಯೇ ಆ ಕುರಿತು ಸ್ಪಷ್ಟನೆ ನೀಡಿರುವ ಶಾಸಕರು, ಅದು ನಕಲಿ ಎಂದು ಹೇಳಿದ್ದಾರೆ.

ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ. ಈ ಹಿಂದೆ ಶಾಸಕನಾಗಿದ್ದಾಗಿನ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಲಾಗಿದೆ. ಆ ಪತ್ರದಲ್ಲಿ ಶಾಂತಿನಗರದ ಮನೆಯ ವಿಳಾಸವಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಬಿಆರ್ ಪಾಟೀಲ್ ಪತ್ರದಲ್ಲಿ ಏನಿತ್ತು?

ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನ ಬಿಡುಗಡೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿತ್ತು. ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರ ವಿಷಯ ಎಂದು ಬಿಆರ್​ ಪಾಟೀಲ್ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: BR Patil: ಸಿಎಂ ಸಿದ್ದರಾಮಯ್ಯಗೆ ಬರೆದಿದ್ದು ಎನ್ನಲಾದ ಪತ್ರ ನಕಲಿ; ಕಾಂಗ್ರೆಸ್‌ ಶಾಸಕ ಬಿಆರ್ ಪಾಟೀಲ್ ಸ್ಪಷ್ಟನೆ

‘ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:06 pm, Tue, 25 July 23