HD Kumaraswamy: ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲಿಸಿಕೊಡಲು ಬಿಜೆಪಿ ನೆರವು; ಹೆಚ್ಡಿ ಕುಮಾರಸ್ವಾಮಿ
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಮೈತ್ರಿ ಏರ್ಪಟ್ಟಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿಕೊಡಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಮೈತ್ರಿ ಏರ್ಪಟ್ಟಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿಕೊಡಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಪಂಚರತ್ನ ಯಾತ್ರೆ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಾರ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸಮರ್ಥ ಅಭ್ಯರ್ಥಿ ಹಾಕುವುದಿಲ್ಲ. ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಅಲ್ಲ, ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ನಡೆದಿದೆ ಎಂದು ಆರೋಪಿಸಿದ್ದಾರೆ.
ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ. ಆ ನಿಟ್ಟಿನಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ಆದರೆ, ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಕಾಂಗ್ರೆಸ್ ಪಕ್ಷವೇ ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ.
‘ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ’
ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಪಿರಿಯಾಪಟ್ಟಣದಲ್ಲಿ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಿರಿಯಾಪಟ್ಟಣದಲ್ಲಿ ಪಂಚರತ್ನ ಯಾತ್ರೆ ಮುಗಿಸಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದೇನೆ. ಬಳಿಕ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡಲಿದ್ದೇನೆ. ನಾಳೆಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಕಾಂಗ್ರೆಸ್ನ ಎರಡನೇ ಪಟ್ಟಿ ಬಿಡುಗಡೆಯಾಗಿದೆ. 42 ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಟಿಕೆಟ್ ಯಾರಿಗೆ ಎಂಬುದನ್ನು ಬಹಿರಂಗಪಡಿಸಿಲ್ಲ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಡೂರು ಟಿಕೆಟ್ ದೊರೆಯುವ ನಿರೀಕ್ಷೆ ಇತ್ತು. ಆದರೆ, ಇದು ಹುಸಿಯಾಗಿದೆ.
ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ