ಉಚಿತ ವಿದ್ಯುತ್‌ಗೆ ಷರತ್ತು ಸೇರಿ 3 ನಿರ್ಧಾರ ವಾಪಸಿಗೆ ಆಗ್ರಹ; ಇಂದು, ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ವಿರುದ್ಧ ಮೊದಲ ಪ್ರತಿಭಟನೆಗೆ ಬಿಜೆಪಿ ಕರೆ ಕೊಟ್ಟಿದೆ. ಗ್ಯಾರಂಟಿಗೆ ವಿಧಿಸಿದ ಷರತ್ತುಗಳನ್ನು ವಿರೋಧಿಸಿ ರಾಜ್ಯಾದ್ಯಂತ ಎರಡ ದಿನ ಪ್ರತಿಭಟನೆಗೆ ಕರೆ ನೀಡಿದೆ.
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾಂಗ್ರೆಸ್ 135 ಸೀಟುಗಳೊಂದಿಗೆ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ಇದೀಗ ಸಿದ್ದರಾಮಯ್ಯನವರ(Siddaramaiah) ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ರಾಜ್ಯ ಬಿಜೆಪಿ(BJP) ಕರೆ ನೀಡಿದೆ. ಕರ್ನಾಟಕ ಸರ್ಕಾರದ ಮೂರು ಜನವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು(ಜೂನ್ 05) ಮತ್ತು ನಾಳೆ(ಜೂನ್ 06) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ. 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂದಿದ್ದ ಕಾಂಗ್ರೆಸ್ ಪಕ್ಷ ಈಗ ಷರತ್ತು ವಿಧಿಸಿರುವುದು, ವಿದ್ಯುತ್ ಶುಲ್ಕ ಹೆಚ್ಚಿಸಿರುವುದು ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಮೆಗೊಳಿಸುವ ನಿರ್ಧಾರಗಳನ್ನು ವಾಪ Kaಸ್ ಪಡೆಯುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಈ ಮುಂಚೆ ಮನೆಗಳಲ್ಲಿ ಪ್ರತಿ ತಿಂಗಳು 70 ಯುನಿಟ್ ವಿದ್ಯುತ್ ಬಳಸುತ್ತಿದ್ದರೆ 80 ಯುನಿಟ್ ಬಳಸಿ. ಆದರೆ, ಯಾವುದೇ ಕಾರಣಕ್ಕೂ 80 ಯೂನಿಟ್ ಮೀರುವಂತಿಲ್ಲ ಎಂಬ ಷರತ್ತು ಅಥವಾ ನಿಬಂಧನೆಯನ್ನು ಸರ್ಕಾರ ಹಾಕಿದೆ. ಹಾಗಿದ್ದರೆ ಈ ಹಿಂದೆ 200 ಯುನಿಟ್ ಎಂದಿದ್ದೀರಲ್ಲವೇ? ಆ ಮಾತನ್ನು ನಡೆಸಿಕೊಡದೆ ಮಾತು ತಪ್ಪಿದವರು ಅಥವಾ ವಚನಭ್ರಷ್ಟತೆ ಆದಂತಲ್ಲವೇ ಎಂದು ಪ್ರಶ್ನಿಸಿದ್ದಾರೆ.
ವಿದ್ಯುತ್ ಶುಲ್ಕವನ್ನೂ ಏರಿಸಿದ್ದೀರಿ. ಒಂದು ಯುನಿಟ್‌ಗೆ 70 ಪೈಸೆ ಹೆಚ್ಚಿಸಲಾಗಿದೆ. ಅಂದರೆ 80 ಯುನಿಟ್‌ಗೆ 56 ರು. ಹೆಚ್ಚಿಸಿದಂತಾಗಿದೆ. ಹಾಗಿದ್ದರೆ ಸರ್ಕಾರ ಮಾಡಿದ್ದೇನು? ಸರ್ಕಾರ ಒಂದೆಡೆ ಉಚಿತ ಎನ್ನುತ್ತದೆ; ಅದೇ ರೀತಿಯಲ್ಲಿ ಶುಲ್ಕ ಹೆಚ್ಚಿಸಿ ಜನರಿಂದಲೇ ಮತ್ತೆ ವಸೂಲಾತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹೆಚ್ಚಿಸಿದ 70 ಪೈಸೆ ದರವನ್ನು ವಾಪಸ್ ಪಡೆಯಲು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.
ಹಾಲು ಉತ್ಪಾದನೆಯಿಂದ ಜೀವನ ಮಾಡುವ ಲಕ್ಷಾಂತರ ಕುಟುಂಬಗಳು ರಾಜ್ಯದಲ್ಲಿವೆ. ಅವರಿಗೆ ಸಹಾಯ ಮಾಡಬೇಕೆಂಬ ದೃಷ್ಟಿಯಿಂದ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್‌ಗೆ 5 ರೂ.ಗೆ ಬಿಜೆಪಿ ಸರ್ಕಾರ ಹೆಚ್ಚಿಸಿತ್ತು. ಅದನ್ನು 1.5 ರು. ಕಡಿಮೆ ಮಾಡಿದ್ದೀರಿ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯ ಆಗುತ್ತಿದೆ. ಹಾಗಿದ್ದರೆ ನೀವು ಬಡವರಿಗೆ ಏನು ಸಹಾಯ ಮಾಡಿದಂತಾಯಿತು? ಬಡವರಿಗೆ ಹೇಗೆ ನೆರವಾದಂತಾಯಿತು ಎಂದು ಕೇಳಿದರು. ಹಾಲು ಉತ್ಪಾದಕರಿಗೆ ದೊಡ್ಡ ಹೊಡೆತ ಬಿದ್ದಿದೆ. ಇದನ್ನು ಬದಲಿಸಿ ಹಿಂದಿನಂತೆ ಪ್ರೋತ್ಸಾಹಧನ ನೀಡಬೇಕು ಎಂದು ರವಿಕುಮಾರ್ ಆಗ್ರಹಿಸಿದ್ದಾರೆ.