ಮೈಸೂರು, ಫೆ.11: ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ಱಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಱಡಿಸನ್ ಬ್ಲೂ ಹೋಟೆಲ್ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಅಮಿತ್ ಶಾ ಆಗಮನಕ್ಕೂ ಮುನ್ನ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮೈಸೂರು-ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್‌ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಆ್ಯಂಬುಲೆನ್ಸ್ ಕರೆಸಿ ಗಾಯಾಳವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ್ದಾರೆ.
ಱಡಿಸನ್ ಬ್ಲೂ ಹೋಟೆಲ್ನಿಂದ ಅಮಿತ್ ಶಾ ಅವರು ಬೆಳಗ್ಗೆ 11ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಅಮಿತ್ ಶಾ, ಬಳಿಕ ಮಂಡಕಹಳ್ಳಿ ಏರ್ಪೋರ್ಟ್ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್ನಲ್ಲಿ ವಿಶೇಷ ಸಿದ್ದತೆ: ಮೆನು ಕಾರ್ಡ್ ಮೇಲೆ ಭಾವಚಿತ್ರ
ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟ ಸೇವಿಸಲಿರುವ ಅಮಿತ್ ಶಾ, ಮಧ್ಯಾಹ್ನ 2.30ಕ್ಕೆ ಱಡಿಸನ್ ಬ್ಲೂ ಹೋಟೆಲ್ಗೆ ಆಗಮಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.40ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣಾ ರಣತಂತ್ರ ಕುರಿತು ಸುಮಾರು 2 ಗಂಟೆಗಳ ಕಾಲ ಈ ಸಭೆ ನಡೆಯಲಿದೆ.
ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ನಡೆಸುವ ಇಂದಿನ ಸಭೆ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದುಕೊಂಡಿದೆ. ಪೂರ್ವನಿಯೋಜಿತ ಕಾರ್ಯಕ್ರಮ ಹಿನ್ನೆಲೆ ಬಿಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಈ ಸಭೆಯಲ್ಲಿ ರಾಜ್ಯದ ಪ್ರಮುಖರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದರ ಹೊರತಾಗಿ ಟಿಕೆಟ್ ವಿಚಾರವಾಗಿ ಯಾವುದೇ ಮಾತುಕತೆ ನಡೆಯುವುದಿಲ್ಲ. ಈಗಾಗಲೇ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ವರಿಷ್ಠರ ಬಳಿ ಮಾಹಿತಿಯಿದೆ ಎಂದು ನಿನ್ನೆ ಟಿವಿ9ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದರು.
ಚಾಮರಾಜನಗರದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಚಾಮರಾಜನಗರ ಜಿಲ್ಲೆಯ 19 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷರು, ನಿಕಟಪೂರ್ವ ಜಿಲ್ಲಾಧ್ಯಕ್ಷರು, ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು, ಪ್ರಮುಖರ ಸಭೆ ಕರೆದಿದ್ದಾರೆ ಎಂದರು.
ಅಮಿತ್ ಶಾ ನೀಡುವ ಸೂಚನೆಯಂತೆ ನಾವು ಕೆಲಸ ಮಾಡುತ್ತೇವೆ. ಅಮಿತ್ ಶಾ ಅನುಭವಿ ನಾಯಕ, ಗೆಲುವಿನ ಸೂತ್ರಗಳು ಗೊತ್ತಿರುತ್ತದೆ. ಏನೇನು ಕಾರ್ಯತಂತ್ರ ರೂಪಿಸಬೇಕೆಂಬ ಬಗ್ಗೆ ಮಾಹಿತಿ ನೀಡುವ ನಿರೀಕ್ಷೆ ಇದೆ. ಕ್ಷೇತ್ರದಲ್ಲಿ ನಾವು ಈಗಾಗಲೇ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಚಾಮರಾಜನಗರ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೊಡಬೇಕು. ಈ ಬಗ್ಗೆ ಅಮಿತ್ ಶಾ ಅವರ ಗಮನಕ್ಕೆ ತರಲಾಗುವುದು ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ