ನವದೆಹಲಿ, ಫೆಬ್ರವರಿ 17: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಬೆಳಗಾವಿಯಿಂದ (Belagavi) ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಇತ್ತೀಚೆಗಷ್ಟೇ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ಬಿಜೆಪಿ (BJP) ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಯಲ್ಲಿರುವ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರ್ತಿದೆ ಎಂಬುದು ಗೊತ್ತಿಲ್ಲ. ಆ ಕುರಿತು ಇಂದಿನ ಸಭೆಯಲ್ಲಿ ಯಾವುದೂ ಚರ್ಚೆ ಆಗಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಶೆಟ್ಟರ್ ಅವರು ಇತ್ತೀಚೆಗೆ ಮರಳಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ, ಅವರು ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ವರದಿಯಾಗಿತ್ತು. ನಂತರ ಆ ಬಗ್ಗೆ ಸಾಕಷ್ಟು ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸ್ಪರ್ಧಿಸುವ ನಿರ್ಧಾರ ಮಾಡಿಲ್ಲ ಎಂದು ಶೆಟ್ಟರ್ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಮಧ್ಯೆ, ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ದೆಹಲಿಯಲ್ಲಿ ಆರಂಭವಾಗಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಯಲಿದೆ. ಜತೆಗೆ, ನರೇಂದ್ರ ಮೋದಿ ಸರ್ಕಾರದ 10 ವರ್ಷಗಳ ಸಾಧನೆ ಬಗ್ಗೆಯೂ ಚರ್ಚೆ ನಡೆಯಲಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸಂಸದರು ಹಾಗೂ ಎಲ್ಲಾ ರಾಜ್ಯಗಳ ಪಕ್ಷದ ಶಾಸಕರು ಭಾಗಿಯಾಗಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಮಂಗಳಾ ಅಂಗಡಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ ಬಗ್ಗೆ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗುವುದಕ್ಕೂ ಮುನ್ನ ಚರ್ಚೆಯಾಗಿತ್ತು. ಆದರೆ, ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಲೆಕ್ಕಾಚಾರಗಳು ಬದಲಾಗಿದ್ದವು. ಶೆಟ್ಟರ್, ಅಂಗಡಿ ಇಬ್ಬರೂ ಬೀಗರಾಗಿರುವ ಹಿನ್ನೆಲೆ ಅವರಿಗೆ ರಾಜಕೀಯ ಲಾಭ ದೊರೆಯುವ ಮಾತುಗಳು ಮುನ್ನೆಲೆಗೆ ಬಂದಿದ್ದವು.
ಇದನ್ನೂ ಓದಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ: ಬೆಳಗಾವಿಯಲ್ಲಿ ಬದಲಾದ ರಾಜಕೀಯ ಲೆಕ್ಕಾಚಾರ
ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಜಗದೀಶ್ ಶೆಟ್ಟರ್ ಅವರೇ ಬೆಳಗಾವಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಈ ವಿಚಾರವಾಗಿ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ ಎಂಬೆಲ್ಲ ಊಹಾಪೋಹಗಳೂ ಹರಡಿದ್ದವು. ಇದೀಗ ಶೆಟ್ಟರ್ ನೀಡಿರುವ ಹೇಳಿಕೆ ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ