ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸರ್ಕಾರಿ ನಿವಾಸ ಕಾವೇರಿಯನ್ನು ತೊರೆದಿದ್ದಾರೆ.
ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(bs yediyurappa) ಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ನಿವಾಸದಲ್ಲಿ ಇದ್ದರು. ಬಳಿಕ ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಕಾವೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಇದೀಗ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ತೊರೆದಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ಖಾಸಗಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೀಗ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಫ್ಟ್ ಆಗಲಿದ್ದಾರೆ.
ಇನ್ನು ಸಿದ್ದರಾಮಯ್ಯನವರ ಅದೃಷ್ಟ ಮನೆ ಎಂದೇ ಹೇಳಲಾದ ಕುಮಾರಕೃಪಾ ಸರ್ಕಾರಿ ನಿವಾಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯನವರು ಈಗ ಕಾವೇರಿಗೆ ಶಿಫ್ಟ್ ಆಗಲಿದ್ದು, ಬಳಿಕ ಸಿದ್ದರಾಮಯ್ಯನವರ ನಿವಾಸಕ್ಕೆ ಡಿಕೆ ಶಿವಕುಮಾರ್ ಗೃಹ ಪ್ರವೇಶ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರು ಈಗ ವಾಸವಿರುವ ನಿವಾಸ ಅದೃಷ್ಟದ ಮನೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಡಿಕೆ ಶಿವಕುಮಾರ್ ಅವರು ಜ್ಯೋತಿಷಿಯವರ ಸಲಹೆ ಮೇರೆಗೆ ಈಗಿರುವ ಸಿದ್ದರಾಮಯ್ಯನವರ ಮನೆಯನ್ನು ಆಯ್ಕೆ ಮಾಡಿದ್ದರು. ಅದರಂತೆ ಆ ಅದೃಷ್ಟದ ಮನೆ ಡಿ.ಕೆ ಶಿವಕುಮಾರ್ ಪಾಲಾಗಿದೆ.
ಕಾವೇರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ. ಅದರ ಪಕ್ಕದಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಇದೆ. ಸಹಜವಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದರವರು ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್ .ಡಿ ಕುಮಾರಸ್ವಾಮಿ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದರೆ ಸಿದ್ದರಾಮಯ್ಯನವರು ಕಾವೇರಿ ನಿವಾಸದಲ್ಲಿ ವಾಸ್ತವ್ಯ ಮುಂದುವರಿಸಿದ್ದರು.
ಸಮ್ಮಿಶ್ರ ಸರ್ಕಾರದ ಪತನವಾದ ಬಳಿಕವೂ ಸಿದ್ದರಾಮಯ್ಯ ಅವರ ಕಾವೇರಿ ತೊರೆಯಲು ಮನಸ್ಸು ಮಾಡಿರಲಿಲ್ಲ. ಅಂದು ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಅವರು ಧವಳಗಿರಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ಗೃಹ ಕಚೇರಿ ಕೃಷ್ಣಾಗೆ ಆಗಮಿಸುತ್ತಿದ್ದರು. ಆದರೆ ಇದು ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂಬ ಕಾರಣಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕುಮಾರಕೃಪಾ ನಿವಾಸವನ್ನು ನೀಡಿ ಕಾವೇರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದರು. ಆದ್ರೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ತಮ್ಮ ವಾಸ್ತವ್ಯವನ್ನು ಮುಂದುವರಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆಯೇ ಯಡಿಯೂರಪ್ಪ ತಾವೇ ಕಾವೇರಿ ನಿವಾಸ ತೊರೆದಿದ್ದಾರೆ.
Published On - 3:58 pm, Thu, 1 June 23