ಬೊಮ್ಮಾಯಿ ಅಷ್ಟೇ ಅಲ್ಲ ಅನೇಕರ ಸೋಲಿಗೆ ವಿಜಯೇಂದ್ರ ಹುನ್ನಾರ ನಡೆಸಿದ್ದರು: ಯತ್ನಾಳ್ ಬಾಂಬ್
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಭುಸುಗುಟ್ಟಿದ್ದಾರೆ. ಅಲ್ಲದೇ ಈ ಬಾರಿ ವಿಜಯೇಂದ್ರ ವಿರುದ್ಧ ಒಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ, (ಡಿಸೆಂಬರ್ 11): ಕಳೆದ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಸವರಾಜ ಬೊಮ್ಮಾಯಿ(Basavaraj Bommai) ಅಷ್ಟೇ ಅಲ್ಲ. ಅನೇಕರ ಸೋಲಿಗೆ ವಿಜಯೇಂದ್ರ (BY Vijayeendra) ಹುನ್ನಾರ ನಡೆಸಿದ್ದರು . ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
.ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕಾಂಗ ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ ಹುದ್ದೆ ಸಿಗುವವರೆಗೂ ನಾನು ಯಾವುದೇ ಸಭೆಗೆ ಹೋಗಲ್ಲ ಎಂದು ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ರೊಚ್ಚಿಗೆದ್ದಿದ್ದಾರೆ. ಅದರಲ್ಲೂ ಕರ್ನಾಟಕ ಬಿಜೆಪಿಯಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾದ ಬಳಿಕ, ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದರು. ಈಗ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವತಃ ತಮ್ಮ ಪಕ್ಷದವರ ವಿರುದ್ಧವೇ ಆರೋಪಗಳನ್ನು ಮಾಡಿ, ಆಕ್ರೋಶ ಹೊರಹಾಕುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇದೇ ರೀತಿ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈಗ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದುವರೆಗೆ ಅವರ ಮೇಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದ ಯತ್ನಾಳ್ ಈಗ ಕೆಲ ಗಂಭೀರ ಆರೋಪಗಳನ್ನು ಮಾಡುತ್ತಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದು ಯಾವ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದು ಕಾದುನೋಡಬೇಕಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ