ಕಗ್ಗಂಟಾಗಿ ಉಳಿದ ಬಿಜೆಪಿ ಅಭ್ಯರ್ಥಿ ಆಯ್ಕೆ: ಸಭೆ ಬಳಿಕ ವಿಜಯೇಂದ್ರ-ಬೊಮ್ಮಾಯಿ ಹೇಳಿದ್ದಿಷ್ಟು
ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ. ಆದ್ರೆ, ಯಾವುದೇ ಫೈನಲ್ ಆಗಿಲ್ಲ. ಯಾರಿಗೆ ಯಾವ ಕ್ಷೇತ್ರದ ಟಿಕೆಟ್ ನೀಡಬೇಕು? ಯಾರನ್ನು ಕೈಬಿಡಬೇಕೆಂಬ ಗೊಂದಲ ಮುಂದುವರೆದಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವುದನ್ನು ರಾಜ್ಯ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.
ನವದೆಹಲಿ, (ಮಾರ್ಚ್ 11): ಲೋಕಸಭಾ ಚುನಾವಣೆ (Loksabha Elections 2024) ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದ್ರೆ, ಬಿಜೆಪಿಯಲ್ಲಿ (BJP) ಟಿಕೆಟ್ ಗೊಂದಲ ಇನ್ನೂ ಬಗೆಹರಿಯುತ್ತಿಲ್ಲ. ಇಂದು (ಮಾರ್ಚ್ 11) ನವದೆಹಲಿಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲೂ ಸಹ (CEC) ರಾಜ್ಯದ 28 ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಆದ್ರೆ, ಯಾವುದೇ ಅಂತಿಮ ತೀರ್ಮಾನವಾಗಿಲ್ಲ. ಮತ್ತೊಂದು ಸಭೆ ಮಾಡಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಮುಂದಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ.
ಇನ್ನು ಸಿಇಸಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆಯಾಗಿದೆ. ಜೆಡಿಎಸ್ ವರಿಷ್ಠರ ಜೊತೆಗೂ ಬಿಜೆಪಿ ಹೈಕಮಾಡ್ ಚರ್ಚೆ ಮಾಡಿದೆ. ನಾಳೆ ಮತ್ತೊಂದು ಸುತ್ತಿನ ಸಭೆಯಲ್ಲಿ ಪಟ್ಟಿ ಅಂತಿಮವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಮೈಸೂರು, ತುಮಕೂರು ಸೇರಿದಂತೆ 28 ಕ್ಷೇತ್ರಗಳ ಬಗ್ಗೆಯೂ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಮಾತ್ರ ಚರ್ಚೆಯಾಗಿದ್ದು. 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಮೈತ್ರಿ ಅಭ್ಯರ್ಥಿಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ. ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ ಎಂದು ಹೇಳಿದರು.
ನಾಳೆ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಬಹುದು
ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆಯಾಗಿದೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಮುಂದಿನ ಸಿಇಸಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಇಂದು ಪಟ್ಟಿ ಬಿಡುಗಡೆ ಮಾಡುವುದಿಲ್ಲ, ನಾಳೆ ಬಿಡುಗಡೆ ಆಗಬಹುದು ಎಂದು ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ