ಉಪಚುನಾವಣೆ ಘೋಷಣೆಗೂ ಮುನ್ನವೇ ರಂಗೇರುತ್ತಿದೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ

| Updated By: ಗಣಪತಿ ಶರ್ಮ

Updated on: Jun 21, 2024 | 7:27 AM

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಉಪಚುನಾವಣೆ ಘೋಷಣೆಯಾಗಿಲ್ಲ. ಆದರೆ, ಡಿಕೆ ಶಿವಕುಮಾರ್ ಎಂಟ್ರಿಯಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಚನ್ನಪಟ್ಟಣದಲ್ಲಿ ಗೆಲ್ಲುವ ಮೂಲಕ ಬೆಂಗಳೂರು ಗ್ರಾಮಾಂತರದ ಸೋಲಿನ ಸೇಡು ತೀರಿಸಿಕೊಳ್ಳಲು ಡಿಕೆ ಸಹೋದರರು ಸಜ್ಜಾಗಿದ್ದರೆ, ಅವರಿಗೆ ಮತ್ತೊಮ್ಮೆ ಸೋಲಿನ ರುಚಿ ತೋರಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಮುಂದಾಗುತ್ತಿದ್ದಾರೆ.

ಉಪಚುನಾವಣೆ ಘೋಷಣೆಗೂ ಮುನ್ನವೇ ರಂಗೇರುತ್ತಿದೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಿಕೆ ಶಿವಕುಮಾರ್ & ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು, ಜೂನ್ 21: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜೀನಾಮೆಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ (Channapatna Assembly Constituency) ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಉಪಚುನಾವಣೆ ಘೋಷಣೆ ಆಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಕದನ ಕಣವಾಗಿ ಮಾರ್ಪಾಡಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಮಾಡುತ್ತಿವೆ. ಅದರಲ್ಲೂ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್​​​ಗೆ ಸೋಲಾಗಿದ್ದು, ಆ ಸೋಲಿನ ರುಚಿ ಮರೆಯಲು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ಬಾವುಟ ಹಾರಿಸಲು ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕೆ ಇಳಿಯುವ ಲೆಕ್ಕಾಚಾರದಲ್ಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಒಲವನ್ನು ಕೂಡ ಡಿಸಿಎಂ ಡಿಕೆ ಶಿವಕುಮಾರ್ ವ್ಯಕ್ತಪಡಿಸಿ ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ.

ಡಿಕೆ ಶಿವಕುಮಾರ್ ಸಕ್ರಿಯರಾದ ಬೆನ್ನಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಾಳಯದಲ್ಲಿ ಚನ್ನಪಟ್ಟಣ ಉಪಚುನಾವಣೆಯ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಸದ್ಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು ಈ ಹಿಂದೆ ಕುಮಾರಸ್ವಾಮಿ ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿಯನ್ನು ಸ್ಪರ್ಧೆ ಮಾಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಒತ್ತಡ ಜೋರಾಗಿದೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಈ ಬಾರಿಯ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್​ರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರಲು ರಾಮನಗರ ಜಿಲ್ಲೆಯ ಮುಖಂಡರಿಂದ ಕುಮಾರಸ್ವಾಮಿಗೆ ಒತ್ತಡ ಶುರುವಾಗಿದೆ. ಅದರೆ ನಿಖಿಲ್ ಸ್ಪರ್ಧೆಯ ಬಗ್ಗೆ ಸದ್ಯಕ್ಕೆ ಕುಮಾರಸ್ವಾಮಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೂ ಮುನ್ನ ಚನ್ನಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕಿಳಿಯುತ್ತಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಡಿಕೆ ಸಹೋದರರ ಎದುರು ಮೈತ್ರಿ ಅಭ್ಯರ್ಥಿಯನ್ನು ಕಣಕಳಿಸಬೇಕಾದ ಅನಿವಾರ್ಯತೆ ಬಿಜೆಪಿ ಜೆಡಿಎಸ್​ಗೆ ಬಂದಿದೆ. ಒಂದು ಕಡೆ ಜೆಡಿಎಸ್ ಕ್ಷೇತ್ರವನ್ನು ಬಿಡಬಾರದು ಎಂಬ ಲೆಕ್ಕಾಚಾರದಲ್ಲಿ ಕಾರ್ಯಕರ್ತರಿಗೆ ಮಣೆ ಹಾಕಲು ಯೋಚನೆ ಮಾಡಿದರೆ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಿಜೆಪಿಯಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆಗಳು ಕೂಡ ಬಿಜೆಪಿ ಪಾಳೆಯದಲ್ಲಿ ಶುರುವಾಗಿದೆ. ಅಲ್ಲದೆ ಸಿಪಿ ಯೋಗೇಶ್ವರ್​ಗೆ ಅವರಿಗೆ ಸೋಲಿನ ಅನುಕಂಪ ಕೂಡ ಇದ್ದು ಡಿಕೆ ಬ್ರದರ್ಸ್ ಸೋಲಿಸಲು ಸೂಕ್ತ ಅಭ್ಯರ್ಥಿ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡಕ್ಕೆ ಡಿಕೆಶಿ: ಸ್ವಾಗತ ಮಾಡುತ್ತಲೇ ತಿವಿದ ಸಿಪಿ ಯೋಗೇಶ್ವರ್

ಸದ್ಯ ಚನ್ನಪಟ್ಟಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಒಲವು ಹೊಂದಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಅನ್ನೋ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ಇದರ ನಡುವೆ ಸಿಪಿ ಯೋಗೇಶ್ವರ್ ಜೆಡಿಎಸ್​ನಿಂದ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಗೆಲುವಿನ ಹಾದಿ ಸುಗಮ ಎಂಬ ಮಾತುಗಳು ಕೇಳಿ ಬರುತ್ತಿವೆ.

ಒಟ್ಟಿನಲ್ಲಿ, ಬೆಂಗಳೂರು ಗ್ರಾಮಾಂತರದಲ್ಲಿ ಸೋತಿರುವ ಡಿಕೆ ಬ್ರದರ್ಸ್ ಚನ್ನಪಟ್ಟಣದಲ್ಲಿ ಗೆಲ್ಲುವ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಸಜ್ಜಾಗಿದ್ದರೆ, ಡಿಕೆ ಸಹೋದರರಿಗೆ ಮತ್ತೊಮ್ಮೆ ಸೋಲಿನ ರುಚಿ ತೋರಿಸಲು ಕಮಲದಳ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ