ಬೆಂಗಳೂರು, (ಡಿಸೆಂಬರ್ 21): ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ (HD Devegowda) ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗುತ್ತಿದ್ದಂತೆ, ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದಾರೆ.
ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್ನಲ್ಲಿ ವಿಚಾರಣೆಗೆ ಬರಬೇಕಿದೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಸಂಭಂಧ ಇಂದು(ಡಿಸೆಂಬರ್ 21) ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮುಂದಿನ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ. ಆದ್ರೆ, ಇತ್ತ ಇಬ್ರಾಹಿಂ ಜೆಡಿಎಸ್ ವರಿಷ್ಠರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
Published On - 6:50 pm, Thu, 21 December 23