ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸೇರಿ ಇತರೆ ಇಲಾಖೆಗಳೊಂದಿಗೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು
ಬೆಂಗಳೂರು, ಜನವರಿ 09: ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಜೊತೆ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದಾರೆ. ವೈದ್ಯಕೀಯ ಕಾಲೇಜುಗಳ ನಿರ್ಮಾಣ, 2024-25ನೇ ಸಾಲಿನ ವೈದ್ಯಕೀಯ ಶಿಕ್ಷಣ ಇಲಾಖೆಗೆ ಅನುದಾನ ಹಂಚಿಕೆ, ಆಸ್ಪತ್ರೆಗಳ ನಿರ್ಮಾಣ ಹೀಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮತ್ತು ಕೆಲ ಸೂಚನೆಗಳನ್ನು ಅಧಿಕಾರಿಗಳಿಗೆ ಸಿಎಂ ನೀಡಿದ್ದಾರೆ.
ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಭೆ ಮುಖ್ಯಾಂಶಯಗಳು
- ಪ್ರಸ್ತುತ ಬಜೆಟ್‌ನಲ್ಲಿ ಇಲಾಖೆಗೆ ರೂ.1864 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಇದುವರೆಗೆ ರೂ. 1235 ಕೋಟಿ ವೆಚ್ಚವಾಗಿದೆ.
- ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು
ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ ರೂ.100 ಕೋಟಿ ಒದಗಿಸಲಾಗಿದೆ,
ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.
- ಕೌಶಲ್ಯಾಭಿವೃದ್ಧಿ ಆದರೆ ಮಾತ್ರ ಉದ್ಯೋಗ ಸಿಗಲು ಸಾಧ್ಯವಿದೆ. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು.
- ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಬೇಕು.
- ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರ ಪೈಕಿ 1,61,883 ಅರ್ಹ ಫಲಾನುಭವಿಗಳಿಗೆ ರೂ.216.38 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
- ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಸುಮಾರು 20ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಕಮ್ಯುನಿಕೇಶನ್ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು.
- ರಾಜ್ಯದಲ್ಲಿ ಆರಂಭಿಸಲಾಗಿರುವ ಅಕ್ಕ ಕಾಫಿ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಸೂಚನೆ.
- ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿಗೆ ಕ್ರಮ. ಐಟಿಐ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:
- ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ.
- 2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
- 2023-24 ಸಾಲಿನಲ್ಲಿ ಅನುಮೋದನೆಗೊಂಡು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು.
- ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
- ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು.
- ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು.
- ಕ್ಯಾನ್ಸರ್ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ವರದಿ: ಈರಣ್ಣ ಬಸವ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.