
ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್ಎಸ್ಎಸ್ (RSS) ಮೇಲೆ ಬುಲ್ಡೋಜರ್ (Bulldozer) ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು. ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡನೀಯ:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಜರಂಗದಳದ ನಾಯಕ ಪ್ರವೀಣ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಜಾತಿ, ಧರ್ಮವನ್ನು ಲೆಕ್ಕಿಸದೇ, ಪೊಲೀಸರು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
Published On - 2:45 pm, Wed, 27 July 22