ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಕುರಿತಾಗಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಹಸ್ಯ ಭೇಟಿ ಮಾಡಿದ್ದು, ಭಾರೀ ಸಂಚನ ಮೂಡಿಸಿದೆ.

ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

Updated on: Jun 14, 2023 | 12:13 PM

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಕುರಿತಾಗಿ ಬಿಜೆಪಿಯ ಇಬ್ಬರು ನಾಯಕರ ಹೇಳಿಕೆಗಳು ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಪ್ರತಿಪಕ್ಷದ ನಾಯಕನ ಆಯ್ಕೆ ಸಂದರ್ಭದಲ್ಲೇ ಸ್ವಪಕ್ಷೀಯರ ಸ್ಫೋಟಕ ಹೇಳಿಕೆಗಳು ಪಕ್ಷದ ನಾಯಕರಿಗೂ ಮುಜುಗರ ತಂದೊಡಿದ್ದು, ಬಿಜೆಪಿ ಆಂತರಿಕ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಸಂಸದ ಪ್ರತಾಪ ಸಿಂಹ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೀಡಿರುವ ಹೇಳಿಕೆ ಯಾರನ್ನು ಉದ್ದೇಶಿಸಿ ಎಂಬ ಪ್ರಶ್ನೆಯೂ ಇದೀಗ ಉದ್ಭವಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೆಸಾರ್ಟ್​ವೊಂದರಲ್ಲಿ ರಹಸ್ಯ ಸಭೆ ಮಾಡಿದ್ದು, ರಾಜ್ಯ ರಾಜಕಾರಣಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.

ಹೌದು…ಕಾಂಗ್ರೆಸ್​ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ನಿನ್ನೆ(ಜೂನ್ 13) ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ಮಾಡಿದ್ದಾರೆ. ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ ಅವರನ್ನ ಬೊಮ್ಮಾಯಿ ಅವರು ದಾವಣಗೆರೆ ನಗರದ ಹೊರವಲಯದ ಪುಣೆ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ವ ರೆಸಾರ್ಟ್​ಗೆ ಕರೆಸಿಕೊಂಡು ಗುಪ್ತ್​-ಗುಪ್ತ್​ ಸಭೆ ಮಾಡಿದ್ದಾರೆ.
ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ನಿನ್ನೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿ ಪಕ್ಷ ಸೋಲಿಸಿದ್ದೀರಿ ಎಂದು ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಜಿಲ್ಲಾ ನಾಯಕರ ವಿರುದ್ಧ ಕಾರ್ಯಕರ್ತರು ಕಿರಿಕಾರಿದ್ದರು. ಇದರ ಬೆನ್ನಲ್ಲೇ ಬೊಮ್ಮಾಯಿ-ಶಾಮನೂರು ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ಬಿಜೆಪಿ ಕೆಲ ನಾಯಕರೇ ಇದರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅದರಲ್ಲೂ ಬಿಜೆಪಿ ಹಿರಿಯ ನಾಯಕರು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರ್ಥದಲ್ಲಿ ಪ್ರತಾಪ ಸಿಂಹ ಹಾಗೂ ಸಿಟಿ ರವಿ ಹೇಳಿಕೆ ನೀಡಿರುವುದು ಕಮಲ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us