ಮಂಗಳೂರಿನಲ್ಲಿ ಜ.21 ನಿಗಧಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಕೆಲ ಮಹತ್ವದ ಚರ್ಚೆಗಳನ್ನು ಮಾಡಿದರು. ಈ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಇದೇ ಜನವರಿ 21ರಂದು ನಿಗದಿಯಾಗಿದ್ದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿದ್ದಾರೆ.
ಬೆಂಗಳೂರು, (ಜನವರಿ 15): ಇದೇ ಜನವರಿ 21ರಂದು ಮಂಗಳೂರಿನಲ್ಲಿ (Mangaluru) ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ (Congress) ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶ ಮುಂದೂಡಿದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದು, ಸಮಾವೇಶದ ದಿನಾಂಕ ಮತ್ತೆ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಸಮಾವೇಶದ ತಯಾರಿ ಕಾರ್ಯಗಳನ್ನ ಮುಂದುವರೆಸುವಂತೆ ಸೂಚಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು(ಜನವರಿ 15) ರಾತ್ರಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಒದಿ: ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್, ಜ.21 ಬೃಹತ್ ಸಮಾವೇಶ
ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿತ್ತು. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಮುಂದಾಗಿತ್ತು. ಆದ್ರೆ, ಜನವರಿ 21ರಂದು ಕೇಂದ್ರದ ನಾಯಕರು ಲಭ್ಯತೆ ಇಲ್ಲದಂತೆ ಕಾಣುತ್ತೆ. ಹೀಗಾಗಿ ಖರ್ಗೆ ಅವರ ಸೂಚನೆ ಮೇರೆಗೆ ಮಂಗಳೂರು ಸಮಾವೇಶವನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರನ್ನು ಒಗ್ಗೂಡಿಸುವ ತಂತ್ರವಾಗಿತ್ತು.ಅಲ್ಲದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರಿಗೆ ಲೋಕಸಭಾ ಚುನಾವಣೆ ಸಂಬಂಧ ಮಾರ್ಗದರ್ಶನ ನೀಡುವವರಿದ್ದರು. ಆದರೆ, ಇದೀಗ ಸಮಾವೇಶವನ್ನು ಮುಂದೂಡಲಾಗಿದ್ದು, ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ