ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಹಾಸನದಲ್ಲಿ ಯತೀಂದ್ರ ಹೇಳಿಕೆ

| Updated By: ಗಣಪತಿ ಶರ್ಮ

Updated on: Jan 17, 2024 | 7:58 AM

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಹೀಗಾಗಿ ಅವರಿಗೆ ನೀವೆಲ್ಲರೂ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.

ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಹಾಸನದಲ್ಲಿ ಯತೀಂದ್ರ ಹೇಳಿಕೆ
ಯತೀಂದ್ರ
Follow us on

ಹಾಸನ, ಜನವರಿ 17: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕಾಂಗ್ರೆಸ್ (Congress) ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ (Yathindra) ಹೇಳಿದ್ದಾರೆ. ಹಾಸನದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಕನಕ ಜಯಂತಿ ಆಚರಣೆ ಶುರು ಮಾಡಿದರು. ನೀವು ಬೆಂಬಲಿಸಿದ್ದರಿಂದಲೇ 2ನೇ ಬಾರಿ ಸಿಎಂ ಆದರು ಎಂದು ಯತೀಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಇತ್ತ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಸುಳಿವು ನೀಡಿದ ಸಚಿವ, ಅತ್ತ ಖರ್ಗೆ ಭೇಟಿಯಾದ ಬಿಜೆಪಿ ನಾಯಕ

ಯತೀಂದ್ರ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಅಪಸ್ವರಕ್ಕೆ ಕಾರಣವಾಗುವ ಎಲ್ಲ ಸಾಧ್ಯೆತಗಳೂ ಇವೆ. ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬದಲಾಗಲಿದೆ ಎಂಬ ಊಹಾಪೋಹಗಳು ಹರಡಿದ್ದವು. ಆದರೆ, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಹಾಗೆಂದು ಮುಂದಿನ ಸಿಎಂ ಡಿಕೆ ಶಿವಕುಮಾರ್ ಆಗಲಿದ್ದಾರೆ ಎಂದು ಅವರ ಬಣದ ನಾಯಕರು ಕೆಲವು ಬಾರಿ ಹೇಳಿಕೆ ನೀಡಿದ್ದರು. ಆದರೆ, ಸಿಎಂ ಬದಲಾವಣೆ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದೆಂಬ ಹೈಕಮಾಂಡ್ ಆಣತಿಯ ನಂತರ ಆ ಬಗ್ಗೆ ಮಾತನಾಡಿರಲಿಲ್ಲ. ಅತ್ತ ಸಿದ್ದರಾಮಯ್ಯ ಬಣದ ಕೆಲವು ನಾಯಕರು ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಕೆಲವು ಬಾರಿ ಹೇಳಿಕೆ ನೀಡಿದ್ದು, ಡಿಕೆ ಶಿವಕುಮಾರ್ ಬಣದ ತೀವ್ರ ಆಕ್ಷೇಪಕ್ಕೆ ಗುರಿಯಾಗಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:56 am, Wed, 17 January 24