ಬೆಂಗಳೂರು, ಆಗಸ್ಟ್ 02: ಚುನಾವಣೆಯಲ್ಲಿ ಅಕ್ರಮ ಜಯಗಳಿಸಿದ್ದಾರೆಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ (HD Revanna) ಮತ್ತು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿರುವ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಶಾಸಕತ್ವ ಅಸಿಂಧು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಅಶ್ವತ್ ರಾಮ್ ಎಂಬುವವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆವಾಗಿ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಪಂಚಾಯಿತಿ ಚುನಾವಣೆಯ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಿಲ್ಲ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರಗಿ ವಾದ ಮಂಡಿಸಿದ್ದು, ಸೆ. 5ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಇದನ್ನೂ ಓದಿ: ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ಗೆ ಅರ್ಜಿ
ಚುನಾವಣಾ ತಕರಾರು ಅರ್ಜಿ ಸಂಬಂಧ ಮಾಜಿ ಸಚಿವ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಖರ್ಗೆ, ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ; ವಿವಾದಿತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅರಗ ಜ್ಞಾನೇಂದ್ರ
ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಆಸಿಂಧುಗೊಳಿಸುವಂತೆ ಕೋರಿ ಕೆಎಂ ಶಂಕರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡುವ ಮೂಲಕ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.