SSLC Preparatory Exam: ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

| Updated By: ಗಣಪತಿ ಶರ್ಮ

Updated on: Feb 03, 2024 | 3:41 PM

ಹತ್ತನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಖರ್ಚುವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಹೆಚ್​ಡಿ ಕು ಆರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಕೊಟ್ಟಿದ್ದೇವೆ ಎಂದುಕೊಂಡು ಜನರಿಂದ ಕಿತ್ತುಹೊಳ್ಳುತ್ತಿರುವ ಗತಿಗೆಟ್ಟ ಸರ್ಕಾರ ಈಗ ಶಾಲಾ ಮಕ್ಕಳ ಜೇಬಿಗೆ ಕೈ ಹಾಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SSLC Preparatory Exam: ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು, ಫೆಬ್ರವರಿ 3: ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ಖಂಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನೂ ಲಗತ್ತಿಸಿದ್ದಾರೆ.

ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸ್​ಎಸ್​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ. ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರ್ಕಾರ ದಿವಾಳಿಯೆದ್ದು ಹೋಗಿದೆಯೆಂಬುದಕ್ಕೆ ಉದಾಹರಣೆ: ಕುಮಾರಸ್ವಾಮಿ ಟ್ವೀಟ್


ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದಕ್ಕೆ ದೇವೇಗೌಡ ಖಂಡನೆ; ಸಿಟಿ ರವಿ ಹೇಳಿದ್ದಿಷ್ಟು

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ. ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ