ಮಹತ್ವದ ಕೆಲಸಕ್ಕೆ ಕೈ ಹಾಕಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಮತ್ತೊಂದು ಸಮರ ಸಾರಿದ ಕಾಂಗ್ರೆಸ್

|

Updated on: Jun 07, 2023 | 8:37 AM

ಒಳ ಮೀಸಲಾತಿ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಹೂಡಿದ್ದಾರೆ. ಮೀಸಲಾತಿ ಹೆಚ್ಚಿಸಿ, ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಮುಸ್ಲಿಮರನ್ನ ತೆಗೆದಿದ್ದ ಬಿಜೆಪಿಗೆ ಬೆಂಡೆತ್ತಿದ್ದಾರೆ. ಟ್ವೀಟ್​ನಲ್ಲೇ ಮೀಸಲಾತಿ ವಿಚಾರಕ್ಕೆ ಸಮರ ಸಾರಿದ್ದಾರೆ.

ಮಹತ್ವದ ಕೆಲಸಕ್ಕೆ ಕೈ ಹಾಕಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಮತ್ತೊಂದು ಸಮರ ಸಾರಿದ ಕಾಂಗ್ರೆಸ್
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು: ಬಿಜೆಪಿ(BJP) ವಿರುದ್ಧ ಕಾಂಗ್ರೆಸ್ (Congress)ಮತ್ತೊಂದು ಸಮರ ಸಾರಿದೆ. ಬಿಜೆಪಿಯ ಒಳ ಮೀಸಲಾತಿ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಹೂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲೇ ಕೇಸರಿ ಪಡೆಯನ್ನ ಕುಟುಕಿರುವ ಸಿದ್ದರಾಮಯ್ಯ(siddaramaiah), ಮೀಸಲಾತಿ ವಿಚಾರಕ್ಕೆ ಸಮರವನ್ನೇ ಸಾರಿದಂತಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ(reservation)ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್​ನಲ್ಲಿ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಮತ್ತೆ ಗೊಂದಲ ಮೂಡಿಸಿದ ಸರ್ಕಾರ

ಮೀಸಲಾತಿ ವಿಚಾರವಾಗಿ ಟ್ವಿಟರ್​ನಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರವನ್ನ ಟೀಕಿಸಿರುವ ಸಿದ್ದರಾಮಯ್ಯ, ಬಿಜೆಪಿ ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್​ಗಾಗಿ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದ್ರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರಿಸಲು ಎಲೆಕ್ಷನ್ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ ಅಂತ ಕುಟುಕಿದ್ದಾರೆ.

ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ನಮ್ಮ ಸರ್ಕಾರ ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಅಂತ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಹಮ್ಮಿಕೊಂಡಿತ್ತು. ಆದ್ರೆ ಸಮೀಕ್ಷೆ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದ್ದವು. ಈಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದಯ ತಿಳಿಸಿದ್ದಾರೆ. ಈ ಮೂಲಕ ಮೀಸಲಾತಿ ವಿಚಾರಕ್ಕೆ ಬಿಜೆಪಿ ವಿರುದ್ಧ ಸಮರ ಸಾರಿದ್ದಾರೆ.

Published On - 8:00 am, Wed, 7 June 23