ಹಾಸನ, ನವೆಂಬರ್ 8: ಕಾಂಗ್ರೆಸ್ ಪಕ್ಷವು ಜೆಡಿಎಸ್ (JDS MLAs) ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ, ಆತಂಕದ ನಡುವೆಯೇ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಬುಧವಾರ ಪಕ್ಷದ 19 ಶಾಸಕರ ಪೈಕಿ 18 ಮಂದಿಯನ್ನು ಪ್ರಸಿದ್ಧ ಹಾಸನಾಂಬ ದೇವಸ್ಥಾನಕ್ಕೆ ಕರೆದೊಯ್ದು ಒಗ್ಗಟ್ಟು ಪ್ರದರ್ಶಿಸಿದರು. ಬಿಜೆಪಿ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್ ಗೈರಾಗಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿಕೆ ಸುರೇಶ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವಂತೆ ಮಾಡಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಈ ಮಧ್ಯೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಮಂಗಳವಾರ ರಾತ್ರಿ ಎಲ್ಲಾ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಅವರ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಕೆಲ ಶಾಸಕರನ್ನು ಸಮಾಧಾನಪಡಿಸಲು ಕುಮಾರಸ್ವಾಮಿ ಯತ್ನಿಸಿದ್ದಾರೆ ಎನ್ನಲಾಗಿದೆ.
ಹಾಸನದ ರೆಸಾರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಶರಣಗೌಡ ಕಂದಕೂರ್ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ಕೆಲವು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದು ಎಂದು ಕೆಲವು ತಪ್ಪು ಮಾಹಿತಿಗಳು ಸುತ್ತುತ್ತಿವೆ, ಅದನ್ನು ಸ್ಪಷ್ಟಪಡಿಸಲು ಮತ್ತು ವಿವಿಧ ವಿಷಯಗಳ ಬಗ್ಗೆ ನಾವು ಸಭೆ ನಡೆಸಿದ್ದೇವೆ. ಕಂದಕೂರ್ ಅವರು ನಮಗೆ ಕುಟುಂಬದವರಿದ್ದಂತೆ, ಅವರೊಂದಿಗೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
15 ಸಚಿವರೊಂದಿಗೆ ಉಪಹಾರ ಸಭೆ ನಡೆಸಿದ ಸಿಎಂ, ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಸೇರಿದಂತೆ ಸುಮಾರು 50 ನಾಯಕರನ್ನು ಕರೆತರುವಂತೆ ಸೂಚಿಸಿದ್ದಾರೆ. ಇನ್ನು ಹಲವು ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಹಲವು ಬಾರಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿಕೊಳ್ಳಲು ಹೆಣಗಾಡುತ್ತಿದೆ ಎಂದು ಕೆಲವು ಮಾಧ್ಯಮ ಚಾನೆಲ್‌ಗಳು ವರದಿ ಮಾಡಿವೆ. ಅವರಲ್ಲಿ ಕೆಲವರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಕಾಂಗ್ರೆಸ್ನ 45 ಶಾಸಕರು: ಹೆಚ್ಡಿ ಕುಮಾರಸ್ವಾಮಿ
ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯಾದ್ಯಂತ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಅವರು ಟೀಕಿಸಿದ್ದಾರೆ.
ಸಭೆಗೆ ಗೈರಾದ ಬಗ್ಗೆ ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್ ಪ್ರತಿಕ್ರಿಯಿಸಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನವಿದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವೆ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ನನ್ನ ಅವಶ್ಯಕತೆ ಇಲ್ಲ. ನನ್ನನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಅವರು ಏನು ಮಾಡುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಅಂತಾ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಕಂದಕೂರ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ