ಗೊಂದಲವಿಲ್ಲದೇ ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಬೇಕು: ವಿಜಯೇಂದ್ರಗೆ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಕಿವಿಮಾತು
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕು ಎಂದು ಅವರು (ದೇವೇಗೌಡ) ನನಗೆ ಹೇಳಿದರು. ಅದರಂತೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗಳು ಒಟ್ಟಾಗಿ ಹೋರಾಡಲಿವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್ 13: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಗೊಂದಲಕ್ಕೆ ಆಸ್ಪದ ನೀಡದೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ (HD Deve Gowda) ಅವರು ಸೋಮವಾರ ಬಿಜೆಪಿ ಕರ್ನಾಟಕ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರ ಬಳಿ ಹೇಳಿದ್ದಾರೆ. ವಿಜಯೇಂದ್ರ ಅವರು ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ ಮತ್ತು ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ಸೌಜನ್ಯಯುತ ಭೇಟಿ ನೀಡಿದ್ದಾರೆ. ಇದೇ ವೇಳೆ ದೇವೇಗೌಡರು ವಿಜಯೇಂದ್ರಗೆ ಕಿವಿ ಮಾತು ಹೇಳಿದ್ದಾರೆ.
ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ನವೆಂಬರ್ 10 ರಂದು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದು, ನವೆಂಬರ್ 15 ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ವಿಜಯೇಂದ್ರ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು, ಶಾಲು ಹೊದಿಸಿ, ಹಾರ ಹಾಕಿ, ಪುಷ್ಪಗುಚ್ಛ ಅರ್ಪಿಸಿ ಗೌರವಿಸಿದ್ದಾರೆ.
ಜೆಡಿಎಸ್ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರ್ಪಡೆಗೊಂಡಿತು ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸುವುದಾಗಿ ಎರಡು ಪಕ್ಷಗಳು ಹೇಳಿವೆ.
ಹೆಚ್‌ಡಿ ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಮಹತ್ವದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಂತೆ ರಾಜ್ಯಾದ್ಯಂತ ಪ್ರವಾಸ ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿಜಯೇಂದ್ರನಲ್ಲಿರುವ ಸಾಮರ್ಥ್ಯ ಮತ್ತು ಕ್ಷಮತೆಯನ್ನು ಪಕ್ಷದ ವರಿಷ್ಠರು ಗುರುತಿಸಿದ್ದಾರೆ: ಎಸ್ ಎಂ ಕೃಷ್ಣ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕು ಎಂದು ಅವರು (ದೇವೇಗೌಡ) ನನಗೆ ಹೇಳಿದರು. ಅದರಂತೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗಳು ಒಟ್ಟಾಗಿ ಹೋರಾಡಲಿವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ ಎಂದು ಹೇಳಿದ ವಿಜಯೇಂದ್ರ, ಮುಂದಿನ ವರ್ಷದ ಚುನಾವಣೆಯು ‘ದೇಶದ ಭವಿಷ್ಯಕ್ಕೆ ಸಂಬಂಧಿಸಿದೆ’ ಮತ್ತು ಆ ನಿಟ್ಟಿನಲ್ಲಿ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ