Anant Nag: ಇಂದು ಸಂಜೆ ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್
ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಬೆಂಗಳೂರು: ಹಿರಿಯ ಚಲನಚಿತ್ರ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ (Anant Nag) ಇಂದು (ಫೆಬ್ರವರಿ 22) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ (BJP) ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ನಾಯಕರು ಕರ್ನಾಟಕದಲ್ಲಿ ಭಾರೀ ಪ್ರಚಾರದಲ್ಲಿ ತೊಡಗಿದ್ದಾರೆ. ನಡ್ಡಾ ಅವರು ಮಂಗಳೂರು, ಉಡುಪಿ, ಚಕ್ಕಮಗಳೂರು ಹಾಸನದ ಕಾರ್ಯಕ್ರಮಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾಗಿಯಾಗಿದ್ದರು. ಮುಂದಿನ ಸೋಮವಾರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ.
ಈ ಮಧ್ಯೆ, ಮಂಡ್ಯದಲ್ಲಿಂದು ಬಿಜೆಪಿ ಯುವ ಸಮಾವೇಶ ನಡೆಯಲಿದ್ದು, 50 ಸಾವಿರ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:28 am, Wed, 22 February 23