ಬಿವೈ ವಿಜಯೇಂದ್ರ ನೇತೃತ್ವದ ಮೊದಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್​

| Updated By: ರಮೇಶ್ ಬಿ. ಜವಳಗೇರಾ

Updated on: Jan 23, 2024 | 9:11 PM

ಮುಂದೂಡಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಹೊಸ ಮುಹೂರ್ತ ಫಿಕ್ಸ್​ ಆಗಿದೆ. .ಈ ಮೊದಲು ಜನವರಿ 19ಕ್ಕೆ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿಯಾಗಿತ್ತು. ಆದ್ರೆ, ಕೆಲ ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಹೊಸ ದಿನಾಂಕ ನಿಗದಿ ಮಾಡಲಾಗಿದ್ದು, ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಮೊದಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಬಿವೈ ವಿಜಯೇಂದ್ರ ನೇತೃತ್ವದ ಮೊದಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್​
ಕರ್ನಾಟಕ ಬಿಜೆಪಿ
Follow us on

ಬೆಂಗಳೂರು,(ಜನವರಿ 23) : ಕೆಲ ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ (BJP State Executive Meeting) ಮರು ನಿಗದಿ ಮಾಡಲಾಗಿದ್ದು, ಇದೇ ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ. ಜನವರಿ 19ಕ್ಕೆ ನಿಗದಿಯಾಗಿ ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕ ನಿಗದಿಯಾಗಿದ್ದು, ಈ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಭಾಗಿಯಾಗಲಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ (BJP Leader P Rajeev) ಅವರು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಕಾರ್ಯಕಾರಣಿ ಸಭೆಯ ಮಾಹಿತಿ ನೀಡಿದರು.

ಇದನ್ನೂ ಓದಿ: ಬಿಎಸ್​ವೈ ಮನೆಯಲ್ಲಿ ಮೈತ್ರಿಕೂಟದ ಮೊದಲ ಸಭೆ: ಈ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಓಕೆ ಎಂದ ಬಿಜೆಪಿ

ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಈ ಸಭೆಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಕಲಬುರಗಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ರಾಜೀವ್‌ ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ. ಯಾವುದೇ ರೀತಿಯ ರಕ್ಷಣೆ ಕೊಡುವ ಕೆಲಸವನ್ನು ಈ ಸರಕಾರ ಮಾಡಿಲ್ಲ ಎಂದು ಟೀಕಿಸಿದರು.

ಅಂಬೇಡ್ಕರರ ಪುತ್ಥಳಿಗೆ ಅವಮಾನ ಮಾಡಿದರೆ ಅದು ದಲಿತ ಸಮುದಾಯಕ್ಕೆ ಅವಮಾನ ಮಾಡಿದಂತೆ. ಈ ಸರಕಾರದಲ್ಲಿ ದಲಿತರಿಗೂ ಅವಮಾನ ಆಗುತ್ತಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆಕ್ಷೇಪಿಸಿದರು. ಕಿಡಿಗೇಡಿಗಳು ಯಾರೇ ಇದ್ದರೂ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.