ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ ನಂತರದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಮುಂದುವರಿದಿದೆ. ಈ ಮಧ್ಯೆ, ಬಾಗಲೂರು ಬಳಿಯ ಫಾರ್ಮ್ಹೌಸ್ನಲ್ಲಿ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗರು ಸಭೆ ನಡೆಸಿದ್ದಾರೆ. ಅಲ್ಲಿ ಮಾತನಾಡಿದ ಶಿವಕುಮಾರ್, ಸಿಎಂ ಹುದ್ದೆಗೆ ಎಲ್ಲರೂ ಆಸೆ ಪಡಲಿ. ಆದರೆ, ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.
ಬಳಿಕ ಅವರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ.
ಈ ಬೆಳವಣಿಗೆಯ ಮಧ್ಯೆಯೇ, ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಸಿ ಸಭೆ ನಡೆಸಲಾಗಿದೆ.
ಮತ್ತೊಂದೆಡೆ, ಸಿದ್ದರಾಮಯ್ಯ ಅವರು ಡಾ.ಯತೀಂದ್ರ, ಜಮೀರ್ ಅಹ್ಮದ್ ಜತೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮುಸ್ಲಿಂ ಉಪಮುಖ್ಯಮಂತ್ರಿ ಭಾಗ್ಯ, ಜೊತೆಗೆ ಲಿಂಗಾಯತ ಮತ್ತು ಒಕ್ಕಲಿಗ ಡಿಸಿಎಂ ಸಹ! ಏನಿದರ ಲೆಕ್ಕಾಚಾರ?
ಭಾನುವಾರ ರಾತ್ರಿ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಶಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ಬಳಿಕ ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದು ಅದನ್ನು ಹೈಕಮಾಂಡ್ಗೆ ಕಳಿಹಿಸಿಕೊಟ್ಟಿದ್ದರು.
ಎಐಸಿಸಿಯ ಮೂವರು ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ