ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ: ರಾಜ್ಯ ಮಟ್ಟದ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

| Updated By: ರಮೇಶ್ ಬಿ. ಜವಳಗೇರಾ

Updated on: Jan 10, 2024 | 3:08 PM

ಲೋಕಸಭೆ ತಯಾರಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಗ್ಯಾರಂಟಿ ಯೋಜನೆ ಮೇಲೆಯೇ ಲೋಕಸಭೆ ಚುನಾವಣೆಗೆ ಹೋಗಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಸಮಿತಿ ರಚನೆ ಮೂಲಕ ಸ್ಪಷ್ಟಪಡಿಸಿಕೊಂಡಿದೆ.

ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ: ರಾಜ್ಯ ಮಟ್ಟದ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ
Follow us on

ಬೆಂಗಳೂರು, (ಜನವರಿ 10): ಮುಂದಿನ ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್‌ (Congress Karnataka) ಈ ಬಾರಿ ಏನಿಲ್ಲವೆಂದರೂ 28 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳನ್ನು(Guarantee  schemes )ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಲಾಗಿದೆ.

ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿ ರಚನೆ ಮಾಡಲಾಗಿದೆ. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 11 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ, ಏನಿದರ ಮರ್ಮ?

ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ಫಿಕ್ಸ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಷಿಕ 16 ಕೋಟಿ ರೂ. ವೆಚ್ಚವಾಗಲಿದೆ. ಈ ಸಮಿತಿ ರಚನೆಯೊಂದಿಗೆ ಕಾಂಗ್ರೆಸ್​, ಗ್ಯಾರಂಟಿಗಳನ್ನೇ ಟ್ರಂಪ್ ಕಾರ್ಡ್​ ಮಾಡಿಕೊಂಡು ಲೋಕಸಭೆ ಚುನಾವಣೆ ಹೋಗುವುದಂತೂ ಸ್ಪಷ್ಟವಾಗಿದೆ.

ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿ, ಯುವ ನಿಧಿ ಸೇರಿದಂತೆ ಐದು ಗ್ಯಾರಂಟಿಗಳು ವಿಧಾನಸಭೆ ಚುನಾವಣೆ ವೇಳೆ ನೀಡಿದ್ದ ಭರವಸೆಗಳು ಕೈ ಹಿಡಿದಿವೆ. ಈ ಐದು ಗ್ಯಾರಂಟಿಗಳನ್ನು ನೋಡಿಯೇ ಜನ ಕಾಂಗ್ರೆಸ್​ಗೆ ಮತ ನೀಡಿದ್ದಾರೆ. ಇದನ್ನು ಸ್ಸವತಃ ವಿರೋಧ ಪಕ್ಷಗಳು ಸಹ ಒಪ್ಪಿಕೊಂಡಿವೆ. ಹೀಗಾಗಿ ಇದೀಗ ಲೋಕಸಭಾ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ಈ ಐದು ಗ್ಯಾರಂಟಿಗಳನ್ನು ಬಳಸಿಕೊಳ್ಳಲು ಮುಂದಾಗಿದೆ.

ಆದ್ರೆ, ಈ ಗ್ಯಾರಂಟಿಗಳು ವಿಧಾನಸಭೆ ಚುನಾವಣೆಯಲ್ಲಿ ವರ್ಕ್ ಆದಂತೆ ಲೋಕಸಭಾ ಚುನಾವಣೆಯಲ್ಲೂ ಕೈ ಹಿಡಿಯುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ