ಬೆಂಗಳೂರು: ಸಿದ್ದರಾಮಯ್ಯ (Siddarmaiah) ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಅಂತಿಮವಾಗಿ ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ(Congress) ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್(BK Hariprasad) ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಅಲ್ಲದೇ ಸಂಭವನೀಯರ ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್ ಅವರ ಹೆಸರು ಇತ್ತು. ಆದ್ರೆ, ಪಟ್ಟಿ ಕೊನೆ ಕ್ಷಣದಲ್ಲಿ ಬದಲಾಗಿದ್ದರಿಂದ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬಿಕೆ ಹರಿಪ್ರಸಾದ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುಸಿಕೊಂಡಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಡಿಕೆ ಶಿವಕುಮಾರ್ ಸಹ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹರಿಪ್ರಸಾದ್ ಅವರಿಗೆ ಮಂತ್ರಿಭಾಗ್ಯ ಸಿಕ್ಕಿಲ್ಲ ಎನ್ನಲಾಗಿದೆ.
ಹರಿಪ್ರಸಾದ್‌ಗೆ ಸಚಿವ ಸ್ಥಾನ ನಿಡಬೇಕೆಂದು ಡಿ.ಕೆ.ಶಿವಕುಮಾರ್ , ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದರು. ಆದ್ರೆ ಸಚಿವ ಸ್ಥಾನ ಯಾವುದೇ ಕಾರಣಕ್ಕೂ ಕೊಡಬಾರದೆಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು, ಈಡಿಗ ಕೋಟಾದಲ್ಲಿ ಹರಿಪ್ರಸಾದ್ ಬದಲು ಮಧುಬಂಗಾರಪ್ಪಗೆ ನೀಡಲು ಒತ್ತಾಯಿಸಿದ್ದರು. ಮಧು ಬಂಗಾರಪ್ಪ ಸೇರ್ಪಡೆಯಾದ್ರೆ ಶಿವಮೊಗ್ಗದಲ್ಲಿ ಹೆಚ್ಚಿನ ಬಲ ಸಿಗಲಿದೆ. ಅಲ್ಲದೆ ಡಾ.ರಾಜಕುಮಾರ್ ಕುಟುಂಬ ಸಹ ಬಂದು ಪ್ರಚಾರ ಮಾಡಿದ್ದಾರೆ. ಶಿವರಾಜಕುಮಾರ್ ಕಾಂಗ್ರೆಸ್ ಪರವಾಗಿ ಬಂದು ಪ್ರಚಾರ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಬದಲೊಗೆ ಮಧುಬಂಗಾರಪ್ಪಗೆ ಸಚಿವ ಸ್ಥಾನ ನೀಡಲೇಬೇಕೆಂದು ಸಿದ್ದರಾಮಯ್ಯ ವಾದ ಮಾಡಿದ್ದರು. ಕೊನೆ ಸಿದ್ದರಾಮಯ್ಯ ಒತ್ತಡಕ್ಕೆ ಹೈಕಮಾಂಡ್ ಮಣಿರು ಮಧುಬಂಗಾರಪ್ಪಗೆ ಮಣೆ ಹಾಕಿದೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈಡಿಗ ಸಮುದಾಯದ ಸ್ವಾಮೀಜಿಗಳು ಕೂಡಾ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ, ಈಡಿಗ ಸಮುದಾಯದ ಕೋಟಾದಡಿಯಲ್ಲಿ ಮಧುಬಂಗಾರಪ್ಪ ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊನೆಗಳಿಗೆಯ ಬೆಳವಣಿಗೆಯಿಂದ ಬಿ.ಕೆ ಹರಿಪ್ರಸಾದ್ ಅಸಮಾಧಾನಗೊಂಡು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Published On - 10:19 am, Sat, 27 May 23