ಜನವರಿ 28ರಂದು ಬಿಜೆಪಿ ಚಾಣಕ್ಯ ಕರ್ನಾಟಕ ಪ್ರವಾಸ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ: ಮಹೇಶ್ ಟೆಂಗಿನಕಾಯಿ
Karnataka Election 2023: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಜನವರಿ 28ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 28ರಂದು ಕರ್ನಾಟಕ್ಕೆ ಭೇಟಿ (Amit Shah Karnataka Visit) ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ (Mahesh Tenginkai) ಹೇಳಿದರು. ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಇದೇ ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇತ್ತೀಚೆಗೆ ಹುಬ್ಬಳ್ಳಿಗೆ ಬಂದಾಗ ಅಭೂತಪೂರ್ವ 8 ಕಿ.ಮೀ ರೋಡ್ ಷೋ ನಡೆಸಿದ್ದನ್ನು ಅವರು ನೆನಪಿಸಿದರು. ಇದು ಅವರ ಜನಪ್ರಿಯತೆಗೆ ಸಾಕ್ಷಿ ಅಂತಾನೂ ಹೇಳಿದರು.
28ರಂದು ಬೆಳಿಗ್ಗೆ ಹುಬ್ಬಳ್ಳಿಯ ಕೆಎಲ್‍ಇ ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಕಾಲೇಜಿನ ಮೈದಾನದಲ್ಲಿ ಕೆಎಲ್‍ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಧಾರವಾಡದ ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಸೆಂಟರ್ನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯ ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿದೆ. ಇದೀಗ ವಿಜಯ ಸಂಕಲ್ಪ ಅಭಿಯಾನ ಉತ್ತಮ ರೀತಿಯಲ್ಲಿ ನಡೆದಿದೆ. ಇದರ ಅಂಗವಾಗಿ ಕುಂದಗೋಳದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಅಭಿಯಾನದಲ್ಲೂ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಮಾತ್ರವಲ್ಲದೆ ಕುಂದಗೋಳದಲ್ಲಿ 300 ವರ್ಷಗಳ ಹಿಂದೆ ನಿರ್ಮಿಸಿದ ಪುರಾತನ ಶಂಭುಲಿಂಗ ದೇವಸ್ಥಾನಕ್ಕೆ ಮಧ್ಯಾಹ್ನ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ನಂತರ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದರು.
ಕುಂದಗೋಳದ ವಾರ್ಡ್ ನಂಬರ್ 7ರ ಬೂತ್ ಸಂಖ್ಯೆ 50ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಹುದೊಡ್ಡ ರೋಡ್ ಶೋದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. 1.5 ಕಿಮೀ ಉದ್ದದ ರೋಡ್ ಶೋ ಇದಾಗಲಿದೆ. ಒಂದೆರಡು ಮನೆಗಳಿಗೆ ಕರಪತ್ರ ವಿತರಣೆ, ಮಿಸ್ ಕಾಲ್ ಮೂಲಕ ಸದಸ್ಯತ್ವ ಅಭಿಯಾನಕ್ಕೂ ಚಾಲನೆ ನೀಡುತ್ತಾರೆ ಎಂದರು.
ಇದನ್ನೂ ಓದಿ: ಇವರ ಮನೆ ಹಾಳಾಗ ಎಲ್ಲದಕ್ಕೂ ಜಿಎಸ್ಟಿ ವಿಧಿಸಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಕಾರ್ಯಕರ್ತರಿಗೆ ಅಮಿತ್ ಶಾ ಭೇಟಿ ಬೂಸ್ಟರ್ ಡೋಸ್‍ನಂತೆ ಕಾರ್ಯ ನಿರ್ವಹಿಸಲಿದೆ. ಸಂಜೆ ಬೆಳಗಾವಿಯ ಕಿತ್ತೂರು ಕ್ಷೇತ್ರದ ವೀರ ಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದ ಬಳಿಯ ಮೈದಾನದಲ್ಲಿ ಜನಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡುವರು. ಕಿತ್ತೂರು, ಖಾನಾಪುರ, ಬೈಲಹೊಂಗಲ ಕ್ಷೇತ್ರಗಳಿಗೆ ಚೈತನ್ಯ ತುಂಬುವ ನಿರೀಕ್ಷೆ ಇದೆ ಎಂದು ಮಹೇಶ್ ಟೆಂಗಿನಕಾಯಿ ತಿಳಿಸಿದರು.
ಈ ಕಾರ್ಯಕ್ರಮದ ಬಳಿಕ ಅಮಿತ್ ಶಾ ಅವರು ಬೆಳಗಾವಿಯಲ್ಲಿ ಹಿರಿಯರ ಜೊತೆ ಸಂವಾದ ನಡೆಸಲಿದ್ದಾರೆ. ಅಲ್ಲದೆ, ಸಂಘಟನಾತ್ಮಕ ಸಭೆಯಲ್ಲೂ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಅನೇಕ ಮುಖಂಡರು ಪಕ್ಷದ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಆಯಾ ಜಿಲ್ಲೆಗಳಲ್ಲಿ ಚುನಾವಣೆಗೆ ಸಂಬಂಧಿಸಿ ಮುಂದಿನ ಕಾರ್ಯತಂತ್ರ ಸೇರಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮಹೇಶ್ ಟೆಂಗಿನಕಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಆರಂಭವಾಗಿದೆ. ನಮ್ಮ ಎಲ್ಲ ನಾಯಕರು ಪಕ್ಷದ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಭ್ರಷ್ಟಾಚಾರ, ಹಗಣದಲ್ಲಿ ಆರೋಪ ಸಾಬೀತಾದವರ ಪೈಕಿ ಶೇ 90ರಷ್ಟು ಕಾಂಗ್ರೆಸ್ನವರು: ಬಿಜೆಪಿ ಮುಖ್ಯ ವಕ್ತಾರ ಮಹೇಶ್
ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿ, ವಿಕಿಪೀಡಿಯ ಪ್ರಕಟಿಸಿದ ಭ್ರಷ್ಟರ ಪಟ್ಟಿಯ 10 ಜನರ ಪೈಕಿ 9 ಜನರು ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು ಎಂದು ಆರೋಪ ಮಾಡಿದರು. ಭ್ರಷ್ಟಾಚಾರಕ್ಕೆ ಸಂಬಂಧಿಸಿ 136 ಆಯೋಗಗಳು ನೇಮಕವಾಗಿವೆ. ಸ್ವಾತಂತ್ರ್ಯದ ಬಳಿಕ 5.40 ಸಾವಿರ ಕೋಟಿ ಮೊತ್ತದ ಭ್ರಷ್ಟಾಚಾರ ಹಗರಣಗಳಾಗಿದ್ದವು. ಆರೋಪ ಸಾಬೀತಾದ ಶೇ 90ರಷ್ಟು ಹಗರಣಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿವೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: Siddaramaiah: ಬಿಜೆಪಿಯವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿದ್ದರಾಮಯ್ಯ
ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಬಿಜೆಪಿಯದು. ಬಿಜೆಪಿಯಲ್ಲಿ ಮೂಲ-ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ಮೋದಿಜಿ ಅವರು ನಮ್ಮ ಪಕ್ಷಕ್ಕೆ ಆದರ್ಶಪ್ರಾಯರಾಗಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ದೂರು ಕೊಟ್ಟ ಕಾಂಗ್ರೆಸ್ಸಿನವರು ರಮೇಶ್‍ಕುಮಾರ್ ಅವರ ಮೂರು ತಲೆಮಾರಿಗೆ ಸಾಕಾಗುವಷ್ಟು ಹಣ ಮಾಡಿದ ಕುರಿತ ಹೇಳಿಕೆ ಸಂಬಂಧ ದೂರು ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಶಾರ್ಟ್ ಕಟ್‍ಗಳಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಆಮಿಷದ ಮೂಲಕ ಚುನಾವಣೆಗೆ ಹೋಗುತ್ತಿಲ್ಲ. ಅಭಿವೃದ್ಧಿ ಮತ್ತು ಸಾಧನೆ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮತ್ತೊಂದು ಪ್ರಶ್ನೆಗೆ ಮಹೇಶ್ ಅವರು ಉತ್ತರ ಕೊಟ್ಟರು. ಒಂದು ರಾಜಕೀಯ ಪಕ್ಷ ಒಂದು ಕುಟುಂಬದ ಕೈಯಲ್ಲಿ ಇರಬಾರದು ಎಂಬುದೇ ಪಕ್ಷದ ನಿಲುವು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕದಲ್ಲಿ 150 ಸೀಟು ಗೆಲ್ಲಿಸುವ ಗುರಿ ನಮ್ಮ ಎದುರಿದೆ. ಅದನ್ನು ಈಡೇರಿಸಲು ನಾವು ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:31 pm, Thu, 26 January 23