ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಕೇಸ್: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್
ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು: ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ , ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿ ಇಂದು(ಜೂನ್ 09) ಆದೇಶ ಹೊರಡಿಸಿದೆ.
ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.
ಹರೀಶ್ ಪೂಂಜಾ ಹೇಳಿದ್ದೇನು?
ಮೇ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಹೇಳಿದ್ದರು. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದರು. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದರು. ಈ ಸಂಬಂಧ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದರು.