
ಬೆಂಗಳೂರು, ಜುಲೈ 02: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Karnataka Government CS) ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ವಿರುದ್ಧ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎನ್ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಬಂಧನದ ಭೀತಿಯಲ್ಲಿದ್ದ ಬಿಜೆಪಿ MLC ರವಿಕುಮಾರ್ ಗೆ ಕೊಂಚ ರಿಲೀಫ್ ನೀಡಿದ ಕೋರ್ಟ್
ಮೇ 24 ರಂದು ಬಿಜೆಪಿಯ ಕಲಬುರಗಿ ಚಲೋಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ಹೇಳಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು. ಈ ಹೇಳಿಕೆ ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲ ಮತ್ತು ಸಭಾಪತಿಗಳಿಗೆ ದೂರು ನೀಡಿದ್ದರು.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ