ಹೈಕಮಾಂಡ್ ಸತೀಶ್ ಜಾರಕಿಹೊಳಿಗೆ ಬೆಳಗಾವಿ ಎಂಪಿ ಟಿಕೆಟ್ ನೀಡಬಾರದು: ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಬಿಜೆಪಿ ಮಣಿಸಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಟಿಕೆಟ್ ಹಂಚಿಕೆ ಮಾತುಕತೆಯೂ ನಡೆಯುತ್ತಿದೆ. ಅದರಂತೆ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ಲಾನ್ ಮಾಡುತ್ತಿರುವ ಕಾಂಗ್ರೆಸ್, ಸಚಿವ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಲು ಮುಂದಾಗಿದೆ. ಆದರೆ, ಇದಕ್ಕೆ ಬೆಂಬಲಿಗರು ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದಾರೆ.
ಬೆಳಗಾವಿ, ಫೆ.8: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ತಂತ್ರಗಾರಿಕೆ ಹೆಣೆಯಲಾಗುತ್ತಿದೆ. ಬೆಳಗಾವಿ (Belagavi) ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಅದರಂತೆ, ಸತೀಶ್ ಜಾರಕಿಹೊಳಿಗೆ (Satish Jarkiholi) ಬೆಳಗಾವಿ ಟಿಕೆಟ್ ನೀಡಲು ಪ್ಲಾನ್ ಮಾಡಿಕೊಂಡಿದ್ದು, ಈ ವಿಚಾರ ತಿಳಿದ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸತೀಶ್ ಜಾರಕಿಹೊಳಿ ಬೆಂಬಲಿಗರಾದ ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ, ಕಾಂಗ್ರೆಸ್ ಹೈಕಮಾಂಡ್ಗೆ ಸಂದೇಶ ರವಾನಿಸಲು ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ ಎಂದು ಹೇಳಿದರು. ಹೈಕಮಾಂಡ್ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಡುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅಭಿವೃದ್ಧಿಗಾಗಿ ಅವರು ಇಲ್ಲೇ ಇರಬೇಕು ಎಂದರು.
ಇದನ್ನೂ ಓದಿ: ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು
ಹನ್ನೊಂದು ಶಾಸಕರನ್ನ ಜಿಲ್ಲೆಯಿಂದ ಕೊಟ್ಟಿದ್ದಾರೆ, ಸರ್ಕಾರ ಬರಲು ನಮ್ಮ ಸಾಹೇಬರು ಕೂಡ ಕಾರಣಕರ್ತರಾಗಿದ್ದಾರೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಆಗಿದ್ದು, ಇವರು ರಾಜ್ಯದಲ್ಲಿ ಇರಬೇಕು, ಕೇಂದ್ರಕ್ಕೆ ಹೋಗಬಾರದು. ಅವರಿಗೆ ಲೋಕಸಭಾ ಟಿಕೆಟ್ ಹೈಕಮಾಂಡ್ ನೀಡಬಾರದು ಎಂದು ಒತ್ತಾಯಿಸಿದರು.
ಜಿಲ್ಲೆಯ ಮತ್ತೊಬ್ಬ ಪ್ರಭಾವಿ ನಾಯಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಕೊಡಲಿ. ಅವರನ್ನು ಕಿತ್ತೂರು ಚನ್ನಮ್ಮ ಅಂತಾ ಕರೆಯುತ್ತಾರೆ. ಅಂಜಲಿ ನಿಂಬಾಳ್ಕರ್ ಇದ್ದಾರೆ. ಅವರಿಗೆ ಟಿಕೆಟ್ ಕೊಡಿ. ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋತರೆ ನಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇವೆ. ಆದರೆ, ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಟ್ಟರೆ ನಾವು ಹೋರಾಟ ಮಾಡುತ್ತೇವೆ ಎಂದರು.
ಜಾರಕಿಹೊಳಿ ಕುಟುಂಬದಿಂದಲೇ ಟಿಕೆಟ್ ಕೊಡಬೇಕು ಅಂದರೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಲಿ. ಇದರ ಹೊರತಾಗಿಯೂ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಟ್ಟರೆ ಮುಂದಿನ ದಿನಗಳಲ್ಲಿ ಬೆಳಗಾವಿಯಿಂದ ಬೆಂಗಳೂರು ಚಲೋ ಮಾಡುತ್ತೇವೆ. ನಮ್ಮ ಸರ್ಕಾರಕ್ಕೆ ಮನವಿ ಮಾಡಿ ಮನವೊಲಿಸಲು ಬೆಂಗಳೂರು ಹೋಗುತ್ತೇವೆ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:52 am, Thu, 8 February 24