ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಯಚೂರು, ಜನವರಿ 15: ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ (Ytindra Siddaramaiah) ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆ ಕ್ಷೇತ್ರಗಳ ಶಾಸಕರು, ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳನ್ನು ಆಧರಿಸಿ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಅಲ್ಲ ಎಂದು ಹೇಳಿದರು.
ಪ್ರತಾಪ್ ಸಿಂಹ ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ಯತೀಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಅಥವಾ ಯತೀಂದ್ರ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದೂ ಹೇಳಿಲ್ಲ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ (ಬೈರತಿ) ಅವರನ್ನು ನೇಮಿಸಲಾಗಿದೆ. ಸುರೇಶ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಸಚಿವರ ತಲೆದಂಡ: ಪರಮೇಶ್ವರ್
ಯತೀಂದ್ರ ಸಿದ್ದರಾಮಯ್ಯ ಅವರನ್ನು ಮೈಸೂರಿನಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಸಂಸದ ಪ್ರತಾಪ್ ಸಿಂಹ್ ಹೇಳಿದ್ದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಪ್ರತಾಪ್ ಸಿಂಹ ಹೇಳಿದ್ದೇನು
ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ-ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅವರು ಎದುರಾಳಿಯಾದರೆ ಒಳ್ಳೆಯದು ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ