ಕಾಂಗ್ರೆಸ್ ನಾಯಕರಿಂದ ಗಿಫ್ಟ್ ಕಾರ್ಡ್​​ ಹಂಚಿ ಮತದಾರರಿಗೆ ಆಮಿಷ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

| Updated By: ಗಣಪತಿ ಶರ್ಮ

Updated on: Apr 26, 2024 | 12:08 PM

ಮತದಾರರ ಮೇಲೆ ಪ್ರಭಾವ ಬೀರುವುದಕ್ಕಾಗಿ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್​ಗಳನ್ನು ಹಂಚುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರಿಂದ ಗಿಫ್ಟ್ ಕಾರ್ಡ್​​ ಹಂಚಿ ಮತದಾರರಿಗೆ ಆಮಿಷ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ಕುಮಾರಸ್ವಾಮಿ
Follow us on

ಬೆಂಗಳೂರು, ಏಪ್ರಿಲ್ 26: ಕಾಂಗ್ರೆಸ್ (Congress) ನಾಯಕರು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ಕಾರ್ಡ್​​ಗಳನ್ನು (Gift Cards) ಹಂಚಿ ಆಮಿಷವೊಡ್ಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಜತೆಗೆ, ಈವರೆಗೂ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ರಾತ್ರಿಯಿಂದಲೂ ಗಿಫ್ಟ್ ಕಾರ್ಡ್ ಹಂಚುತ್ತಿದ್ದಾರೆ. 4 ಸಾವಿರದಿಂದ 10 ಸಾವಿರದ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಏನೇ ದೂರು ಕೊಟ್ಟರೂ ಉಪಯೋಗ ಇಲ್ಲ. ಚುನಾವಣಾ ಆಯೋಗ ಅಸ್ತಿತ್ವದಲ್ಲಿ ಇದೆಯಾ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣ ದಾಖಲು: ಚುನಾವಣಾ ಆಯೋಗ

ರಾಮನಗರದ ನೆಲಮಲೆ ಗ್ರಾಮದಲ್ಲಿ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಕಾರ್ಡ್​​ನಲ್ಲಿ ಮುದ್ರಿಸಿ ಬೆಳ್ಳಿ ಬಟ್ಟಲು, ಕುಂಕುಮ ಹಾಗೂ ಅಕ್ಷತೆ ಇಟ್ಟು ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಇದನ್ನು ಪ್ರಶ್ನಿಸಿದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆಗೂ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರು ಮತದಾರರನ್ನು ಸೆಳೆಯುವುದಕ್ಕಾಗಿ ‘ಗ್ಯಾರಂಟಿ ಕಾರ್ಡ್​’ಗಳನ್ನು ನೀಡುತ್ತಿರುವುದು ಇತ್ತೀಚೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗಿತ್ತು. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ವಿರೋಧ ವ್ಯಕ್ತಪಡಿಸಿದ್ದವು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ ನೀಡಿದ್ದ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಅದನ್ನೇ ಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಗ್ಯಾರಂಟಿ ಕಾರ್ಡ್ ಹಂಚಿಕೆ ಶುರುಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗವನ್ನು ಆಗ್ರಹಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ