Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕರಂದ್ಲಾಜೆಯ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಪ್ರಮೋದ್ ಮಧ್ವರಾಜ್ ಕಣ್ಣು!

ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ ಎಂದು ಹೇಳಿದ್ದೆ. ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಮತ್ತು ನಾನು ನನ್ನ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಒಂದು ವೇಳೆ ಕೊನೆ ಗಳಿಗೆಯಲ್ಲಿ ಟಿಕೆಟ್ ಸಿಕ್ಕರೆ ಕಷ್ಟವಾಗುತ್ತದೆ. ಹೀಗಾಗಿ ಬೂತ್ ಮಟ್ಟದ ನಾಯಕರ ಜತೆ ಜನ ಸಂಪರ್ಕ ಆರಂಭಿಸಿದ್ದೇನೆ ಎಂದು ಮಧ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ಶೋಭಾ ಕರಂದ್ಲಾಜೆಯ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಪ್ರಮೋದ್ ಮಧ್ವರಾಜ್ ಕಣ್ಣು!
ಶೋಭಾ ಕರಂದ್ಲಾಜೆ & ಪ್ರಮೋದ್ ಮಧ್ವರಾಜ್
Follow us
Ganapathi Sharma
|

Updated on:Nov 22, 2023 | 2:42 PM

ಬೆಂಗಳೂರು, ನವೆಂಬರ್ 22: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ (Udupi-Chikkamagaluru Lok Sabha Constituency) ಟಿಕೆಟ್‌ ಮೇಲೆ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ (Pramod Madhwaraj) ಕಣ್ಣಿಟ್ಟಿದ್ದಾರೆ. ಟಿಕೆಟ್ ಸಿಗುವ ಭರವಸೆಯಲ್ಲಿ ಮಧ್ವರಾಜ್ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ 2022 ರ ಮೇ ತಿಂಗಳಲ್ಲಿ ಬಿಜೆಪಿ ಸೇರಿದ್ದಾರೆ. ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಪಕ್ಷವು ಯಶಪಾಲ್ ಸುವರ್ಣ ಅವರನ್ನು ಕಣಕ್ಕಿಳಿಸಿ ಗೆಲುವು ಸಾಧಿಸಿತ್ತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್‌ಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಾವೂ ಒಬ್ಬರೆಂದು ಈ ವರ್ಷದ ಜೂನ್‌ನಲ್ಲಿ ಅವರು ಹೇಳಿದ್ದರು. ಅಂದಿನಿಂದ ಅವರು ತಮ್ಮ ಉಮೇದುವಾರಿಕೆಗಾಗಿ ಪ್ರಚಾರ ನಡೆಸುತ್ತಿದ್ದಾರೆ ಮತ್ತು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಮಧ್ವರಾಜ್ ಕಳೆದ ಕೆಲವು ತಿಂಗಳಿಂದ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿ ಜನಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ ಎಂದು ಹೇಳಿದ್ದೆ. ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಮತ್ತು ನಾನು ನನ್ನ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಒಂದು ವೇಳೆ ಕೊನೆ ಗಳಿಗೆಯಲ್ಲಿ ಟಿಕೆಟ್ ಸಿಕ್ಕರೆ ಕಷ್ಟವಾಗುತ್ತದೆ. ಹೀಗಾಗಿ ಬೂತ್ ಮಟ್ಟದ ನಾಯಕರ ಜತೆ ಜನ ಸಂಪರ್ಕ ಆರಂಭಿಸಿದ್ದೇನೆ. ನನಗೆ ಟಿಕೆಟ್ ಸಿಗುತ್ತದೋ ಇಲ್ಲವೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಮಧ್ವರಾಜ್ ಪ್ರತಿಕ್ರಿಯಿಸಿರುವುದಾಗಿ ‘ನ್ಯೂಸ್ 9’ ವರದಿ ಮಾಡಿದೆ.

ಶೋಭಾ ಕರಂದ್ಲಾಜೆ ಬೇರೆ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ನಂತರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳು ಹರಡಿವೆ. ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದಾರೆ.

ಇದನ್ನೂ ಓದಿ: ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ ಪ್ರಮೋದ್ ಮಧ್ವರಾಜ್

2016-18ರ ನಡುವೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಮೋದ್ ಮಧ್ವರಾಜ್ ಸಚಿವರಾಗಿದ್ದರು. ಅವರು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಿಂದ ಬಿಜೆಪಿಯ ಕೆ ರಘುಪತಿ ಭಟ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಬಳಿಕ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಶೋಭಾ ಕರಂದ್ಲಾಜೆ ವಿರುದ್ಧ ಸೋತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:41 pm, Wed, 22 November 23