Mallikarjun Kharge: ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

| Updated By: ಸುಷ್ಮಾ ಚಕ್ರೆ

Updated on: Oct 26, 2022 | 8:24 AM

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದರು. ಇಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದ್ದಾರೆ.

Mallikarjun Kharge: ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
ಮಲ್ಲಿಕಾರ್ಜುನ ಖರ್ಗೆ
Follow us on

ನವದೆಹಲಿ: ಬಲಿಪಾಡ್ಯಮಿಯ ದಿನವಾದ ಇಂದು ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ (Congress President) ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ತಮ್ಮ ಉತ್ತರಾಧಿಕಾರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸುವ ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಭಾರೀ ಸಿದ್ಧತೆಗಳು ನಡೆದಿವೆ. ಕಳೆದ 24 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸುವ ಮೊದಲ ಗಾಂಧಿಯೇತರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಿದ್ದಾರೆ.

ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇರ ಪೈಪೋಟಿಗೆ ಇಳಿದಿದ್ದರು. ಈ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲ ಸಮಯ ಕಳೆದರು. ಇಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಲಿದ್ದು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: Congress President Election Result: ಬಿಜೆಪಿ ವಿರುದ್ಧ ಪುಟಿದೇಳುವ ಕನಸು ಹೊತ್ತ ಕಾಂಗ್ರೆಸ್​ಗೆ ಮಲ್ಲಿಕಾರ್ಜುನ ಖರ್ಗೆ ಸಾರಥ್ಯ

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಔಪಚಾರಿಕವಾಗಿ ಚುನಾವಣಾ ಪ್ರಮಾಣಪತ್ರವನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದು, ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಉಪಸ್ಥಿತರಿರಲಿದ್ದಾರೆ.

80 ವರ್ಷದ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ ಮತ್ತು ನಂತರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಈಗ ಕೇವಲ 2 ರಾಜ್ಯಗಳಾದ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾತ್ರ ಅಧಿಕಾರದಲ್ಲಿ ಉಳಿದಿದೆ.

2023ರಲ್ಲಿ ಮಲ್ಲಿಕಾರ್ಜುನ ಖರ್ಗೆ 9 ಅವಧಿಗೆ ಶಾಸಕರಾಗಿದ್ದ ಅವರ ತವರು ರಾಜ್ಯ ಕರ್ನಾಟಕ ಸೇರಿದಂತೆ 9 ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಜವಾಬ್ದಾರಿಯನ್ನು ಎದುರಿಸಿದ್ದರು. ಗುಲ್ಬರ್ಗ ನಗರ ಸಭೆಯ ಅಧ್ಯಕ್ಷರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಸಚಿವರಾಗಿ ಮತ್ತು ಗುಲ್ಬರ್ಗದಿಂದ ಲೋಕಸಭೆಯ ಸಂಸದರಾಗಿ (2009 ಮತ್ತು 2014) ಸೇವೆ ಸಲ್ಲಿಸಿದ್ದಾರೆ. ಬಳಿಕ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ನೇಮಕ ಮಾಡಿದರು. ಫೆಬ್ರವರಿ 2021ರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದರು.

ಇದನ್ನೂ ಓದಿ: ಅಧಿಕೃತ ಘೋಷಣೆಗೂ ಮೊದಲೇ ಮಲ್ಲಿಕಾರ್ಜುನ ಖರ್ಗೆ ಗೆಲುವನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದು ಹೇಗೆ?; ಸ್ಪಷ್ಟನೆ ನೀಡಿದ ಕಾಂಗ್ರೆಸ್

ಕೊನೆಯ ಬಾರಿಗೆ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಸೀತಾರಾಮ್ ಕೇಸ್ರಿ. ಅವರು ತಮ್ಮ 5 ವರ್ಷಗಳ ಅವಧಿಗೆ ಎರಡು ವರ್ಷಗಳ ನಂತರ 1998ರಲ್ಲಿ ಅನಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲ್ಪಟ್ಟರು. ರಾಜಕೀಯದಲ್ಲಿ 50 ವರ್ಷಕ್ಕೂ ಹೆಚ್ಚು ಅನುಭವ ಹೊಂದಿರುವ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಸ್. ನಿಜಲಿಂಗಪ್ಪ ಅವರ ನಂತರ ಕರ್ನಾಟಕದ ಎರಡನೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಿದ್ದಾರೆ.

ಕಳೆದ ವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆದಿದ್ದರು. ಈ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 416 ಮತಗಳು ಅಮಾನ್ಯಗೊಂಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ