ಬೆಂಗಳೂರು: ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಮಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ (Siddaramaiah) ಟ್ವೀಟ್ ಮಾಡಿದ್ದು, ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸ್ತೇವೆ ಎಂದಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ.
ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ.
3/5…— Siddaramaiah (@siddaramaiah) June 8, 2023
ಇದನ್ನೂ ಓದಿ: Chikmagalur News; ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.
ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯ ಮೆಹಬೂಬ್ ನಗರದಲ್ಲಿ ಯುವಕರು ನೈತಿಕ ಪೊಲೀಸ್‌ಗಿರಿ ನಡೆಸಿರುವುದಾಗಿ ಇತ್ತೀಚೆಗೆ ತಿಳಿದುಬಂದಿತ್ತು. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿತ್ತು. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದರು.
ಚೇಳೂರು ಮೂಲದ ಯುವತಿ, ಚಿಂತಾಮಣಿ ಮೂಲದ ಯುವಕ ಜತೆಗೆ ಇದ್ದಾಗ ಸ್ಥಳಕ್ಕೆ ಬಂದ ಯುವಕರು ಯುವಕನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:18 pm, Thu, 8 June 23